ಮುದೂರಿನಲ್ಲಿ ಡೆಂಗಿ ಪ್ರಕರಣ ಹೆಚ್ಚಳ: ಉಡುಪಿ ಜಿಲ್ಲಾಧಿಕಾರಿ ಭೇಟಿ

Update: 2022-04-26 15:38 GMT

ಕುಂದಾಪುರ : ಜಡ್ಕಲ್ ಗ್ರಾಮ ಮುದೂರು ಪ್ರದೇಶದಲ್ಲಿ ಹೆಚ್ಚುತ್ತಿರುವ ಡೆಂಗಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಮಂಗಳವಾರ ಭೇಟಿ ನೀಡಿ ಪರಿಸರದ ಜನರೊಂದಿಗೆ ಸಮಾಲೋಚನೆ ನಡೆಸಿದರು.

ಮುದೂರಲ್ಲಿ ಕಳೆದ ನಾಲ್ಕಾರು ವರ್ಷದಿಂದ ಡೆಂಗಿ ಕಾಣಿಸಿಕೊಳ್ಳುತ್ತಿದ್ದು, ಪ್ರಸಕ್ತ 20 ಜನ ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 15 ಜನ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಡೆಂಗಿ ಜ್ವರದಿಂದ ಬಳಲುತ್ತಿದ್ದ ಓರ್ವ ಮಹಿಳೆ ಮೃತಪಟ್ಟಿದ್ದಾರೆ.

ಮುದೂರು ಪರಿಸರದಲ್ಲಿ ರಬ್ಬರ್ ಪ್ಲಾಂಟೇಶನ್ ಅಧಿಕವಿದ್ದು, ಟ್ಯಾಪಿಂಗ್ ಮಾಡಲು ಕಟ್ಟಿದ ಗರಟದಲ್ಲಿ ನೀರು ನಿಲ್ಲುವುದರಿಂದ ಸೊಳ್ಳೆ ಉತ್ಪತ್ತಿಯಾಗಿ ಡೆಂಗ್ಯು ಜ್ವರಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಡೆಂಗ್ಯೂ ಪ್ರದೇಶದಲ್ಲಿ ಫಾಗಿಂಗ್ ಮಾಡಿ, ಸೊಳ್ಳೆ ಉತ್ಪತ್ತಿಯಾಗುವುದನ್ನು ನಿಯಂತ್ರಿಸಲು ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಪಂ ಸಿಇಒ ಡಾ.ನವೀನ್ ಭಟ್ ವೈ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ,  ತಾಲೂಕು ಆರೋಗ್ಯಾಧಿಕಾರಿ ಡಾ.ರಾಜೇಶ್ವರಿ, ಡಾ.ಪ್ರೇಮಾನಂದ, ಜಡ್ಕಲ್ ಗ್ರಾಪಂ ಅಧ್ಯಕ್ಷೆ ವನಜಾಕ್ಷಿ ಶೆಟ್ಟಿ, ಉಪಾಧ್ಯಕ್ಣ ಲಕ್ಷ್ಮಣ ಶೆಟ್ಟಿ, ಗ್ರಾಪಂ ಸದಸ್ಯ ನಾರಾಯಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News