ಮೇ 16ರಿಂದ ಸಮಗ್ರ ಕೃಷಿ ಅಭಿಯಾನ

Update: 2022-05-07 15:42 GMT

ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಮಗ್ರ ಕೃಷಿ ಅಭಿಯಾನ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಕಾರ್ಯಕ್ರಮ ಮೇ ೧೬ರಿಂದ ೨೮ ರವರೆಗೆ ಉಡುಪಿ ತಾಲೂಕಿನ ಎಲ್ಲಾ ಹೋಬಳಿಗಳ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಂಗವಾಗಿ ಗ್ರಾಮ ಪಂಚಾಯತ್‌ಗಳಿಗೆ ಭೇಟಿ ನೀಡಿ, ಕೃಷಿ ಹಾಗೂ ಬೇಸಾಯ ಸಂಬಂಧಿತ ಇಲಾಖೆಗಳ ಸಮನ್ವಯದೊಂದಿಗೆ ಸಮಗ್ರ ಕೃಷಿ ಮಾಹಿತಿಯನ್ನು ರೈತರಿಗೆ ತಲುಪಿಸುವುದು, ರೈತರಿಗೆ ಉತ್ಪಾದಕತೆ ಹೆಚ್ಚಿಸುವ ತಾಂತ್ರಿಕತೆಗಳ ಮನವರಿಕೆ ಹಾಗೂ ವಿಜ್ಞಾನಿಗಳೊಂದಿಗೆ ರೈತರ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.

ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ನಿಗದಿಪಡಿಸಿದ ದಿನಾಂಕದಂದು ಎಲ್ಲಾ ಪಂಚಾಯತ್‌ಗೆ ಸಮಗ್ರ ಕೃಷಿ ಮಾಹಿತಿ ರಥ, ವಿವಿಧ ಇಲಾಖಾಧಿಕಾರಿಗಳು ಹಾಗೂ ವಿಜ್ಞಾನಿಗಳ ತಂಡ ಭೇಟಿ ನೀಡಲಿದ್ದು, ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News