ನೆರೆ, ಪ್ರಾಕೃತಿಕ ವಿಕೋಪ ಸಂದರ್ಭಗಳಲ್ಲಿ ತುರ್ತು ಪರಿಹಾರ ಕೈಗೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾರಾವ್
ಉಡುಪಿ : ಸತತ ಮಳೆಯಿಂದ ಉಂಟಾಗುವ ನೆರೆ ಸೇರಿದಂತೆ ಪ್ರಕೃತಿ ವಿಕೋಪಗಳು ಸಂಭವಿಸಿದಾಗ, ಸ್ಥಳಿಯ ಸಿಬ್ಬಂದಿಗಳು ತಕ್ಷಣದಲ್ಲಿ ಪರಿಸ್ಥಿತಿಗೆ ಸ್ಪಂದಿಸಿದಾಗ ಹೆಚ್ಚಿನ ಅನಾಹುತಗಳಾಗುವುದನ್ನು ತಪ್ಪಿಸುವ ಜೊತೆಗೆ ಪರಹಾರ ಕಾರ್ಯಗಳನ್ನು ತಕ್ಷಣ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದ್ದಾರೆ.
ಬುಧವಾರ ಮಣಿಪಾಲದ ಜಿ.ಪಂ ಸಭಾಂಗಣದಲ್ಲಿ, ಮುಂಗಾರು ಮಳೆ ಮತ್ತು ಕೃಷಿ ಚಟುವಟಿಕೆ ಪ್ರಾರಂಭ ಗೊಳ್ಳುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಹೆಚ್ಚಿನ ಮಳೆ ಗಾಳಿ ಸೇರಿದಂತೆ, ಪ್ರಾಕೃತಿಕ ವಿಕೋಪದ ಮುನ್ಸೂಚನೆಗಳು ಈಗಾಗಲೇ ದೊರೆಯುತ್ತಿದ್ದು, ಅದಕ್ಕೆ ಅನುಗುಣವಾಗಿ ಪೂರ್ವ ತಯಾರಿಗಳನ್ನು ಮಾಡಿಕೊಳ್ಳುವುದರ ಜೊತೆಗೆ ಹಿಂದಿನ ವರ್ಷಗಳಲ್ಲಿ ಸಂಭವಿಸಿರುವ ನೆರೆ ಪ್ರದೇಶಗಳನ್ನು ಗುರುತಿಸಿ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವು ದರಿಂದ ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಪ್ರತೀ ತಾಲೂಕಿನಲ್ಲಿಯೂ ಪ್ರಾಕೃತಿಕ ವಿಕೋಪಗಳನ್ನು ಯಾವ ರೀತಿಯಲ್ಲಿ ತಂಡಗಳು ಎದುರಿಸಬೇಕು ಎಂಬ ಬಗ್ಗೆ ಅಣುಕು ಪ್ರದರ್ಶನ, ಅಭ್ಯಾಸಗಳನ್ನು ನಡೆಸುವುದರೊಂದಿಗೆ, ವಿಕೋಪ ಸಂದರ್ಭವನ್ನು ಸಮರ್ಥವಾಗಿ ಎದುರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದ ಅವರು, ಜೊತೆಗೆ ತಮಗೆ ಅಗತ್ಯ ವಿರುವ ಸುರಕ್ಷಿತಾ ಪರಿಕರಗಳ ಉಪಯೋಗದ ಬಗ್ಗೆಯೂ ಸಹ ಅನುಭವ ಪಡೆದುಕೊಳ್ಳುವಂತೆ ತಿಳಿಸಿದರು.
24 ಗಂಟೆಯೊಳಗೆ ಪರಿಹಾರ: ಪ್ರಕೃತಿ ವಿಕೋಪಗಳಿಂದ ಉಂಟಾಗುವ ಪ್ರಾಣ ಹಾನಿಗೆ ೨೪ ಗಂಟೆಯೊಳಗೆ ಪರಿಹಾರವನ್ನು ಒದಗಿಸಬೇಕು. ಮನೆ ಹಾಗೂ ಬೆಳೆಹಾನಿಗಳ ಅಂದಾಜು ಮೊತ್ತವನ್ನು ೪೮ ಗಂಟೆಯ ಒಳಗಾಗಿ ವರದಿಯನ್ನು ನೀಡುವುದರ ಜೊತೆಗೆ ಪರಿಹಾರ ಮೊತ್ತವನ್ನು ಸಾಧ್ಯವಾದಷ್ಟು ಶೀಘ್ರದಲ್ಲಿ ವಿತರಿಸುವ ಕಾರ್ಯ ಆಗಬೇಕು ಎಂದರು.
ತಾಲೂಕು ಮಟ್ಟದಲ್ಲಿ, ಗ್ರಾಮಪಂಚಾಯತ್ ಮಟ್ಟದಲ್ಲಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಪ್ರಕೃತಿ ವಿಕೋಪ ನಿರ್ವಹಣಾ ಸಮಿತಿ ಸಭೆಗಳನ್ನು ಮಾಡುವುದರ ಜೊತೆಗೆ ಸಕಲ ಪೂರ್ವ ಸಿದ್ದತೆಗಳನ್ನು ಮಾಡಿ ಕೊಂಡು, ತೊಂದರೆಗೊಳಗಾದವರಿಗೆ ತಕ್ಷಣದಲ್ಲಿ ಸ್ಪಂದಿಸಲು ಮುಂದಾಗಬೇಕು ಎಂದು ಅವರು ಸ್ಪಷ್ಟ ಸೂಚನೆ ಗಳನ್ನು ನೀಡಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರಿನಿಂದ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಅಗತ್ಯ ವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ಕುಂದಾಪುರ, ಪಡುಬಿದ್ರೆ, ಕಾಪುವಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀದಿ ದೀಪಗಳನ್ನು ಅಳವಡಿಸಬೇಕು. ಬೈಂದೂರಿನ ಕೆಲವು ಭಾಗಗಳಲ್ಲಿ ಮಣ್ಣು ಕುಸಿತಗಳಾಗು ತ್ತವೆ ಈ ಬಗ್ಗೆ ಎಚ್ಚರವಹಿಸಬೇಕು ಎಂದ ಅವರು, ಈ ಸಂಬಂಧ ಸಾರ್ವಜನಿಕ ಸಹಾಯವಾಣಿ ೧೦೩೩ಕ್ಕೆ ದೂರುಗಳು ಬಂದಲ್ಲಿ ತಕ್ಷಣ ಸ್ಪಂದಿಸಬೇಕು ಎಂದರು.
ಸಾಂಕ್ರಾಮಿಕ ರೋಗದ ಬಗ್ಗೆ ಮುನ್ನೆಚ್ಚರಿಕೆ: ಮಳೆಯ ನೀರು ಎಲ್ಲೆಂದರಲ್ಲಿ ನಿಲ್ಲುವುದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳ ಬೇಕು. ಯಾವುದೇ ರೋಗ ಬಂದು ಚಿಕಿತ್ಸೆ ನೀಡುವ ಬದಲು ರೋಗ ಬಾರದಂತೆ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಆರೋಗ್ಯ ಇಲಾಖೆ ಅಧಿಕಾರಿ ಗಳಿಗೆ ಸೂಚಿಸಿದರು.
ರಸ್ತೆ ಬದಿಯ ಅಪಾಯಕಾರಿ ಮರಗಳನ್ನು ಶೀಘ್ರದಲ್ಲಿಯೇ ತೆರವುಗೊಳಿಸುವ ಕಾರ್ಯಗಳನ್ನು ಕೈಗೊಳ್ಳಬೇಕು. ಮಳೆ ಗಾಳಿಯಿಂದ ಮರಗಳು ರಸ್ತೆಗೆ ಉರುಳಿ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗದಂತೆ ಶೀಘ್ರದಲ್ಲಿಯೇ ತೆರವು ಕಾರ್ಯ ಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
೫೬.೫೩ ಲಕ್ಷ ರೂ.ನಷ್ಟದ ಅಂದಾಜು: ಜಿಲ್ಲೆಯಲ್ಲಿ ಈವರೆಗೆ ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಿದ್ದು, ಒಂದು ಜೀವಹಾನಿಯಾಗಿದೆ. ಸಿಡಿಲಿನಿಂದ ಒಬ್ಬರಿಗೆ ಗಾಯ, ತೋಟಗಾರಿಕೆ ಬೆಳೆಗಳಿಗೆ ಹಾನಿಯ ೫೧ ಪ್ರಕರಣಗಳು, ೫ ಮನೆಗಳು ಪೂರ್ಣಪ್ರಮಾಣದಲ್ಲಿ ಹಾನಿಯಾಗಿ, ೧೦೭ ಮನೆಗಳಿಗೆ ಭಾಗಶ: ಹಾನಿಯಾಗಿವೆ. ಒಟ್ಟಾರೆ ೧೮೪ ಪ್ರಕರಣಗಳಲ್ಲಿ ೫೬,೫೩,೧೧೮ ರೂ ನಷ್ಟದ ಅಂದಾಜು ಮಾಡಲಾಗಿದ್ದು, ೯೧ ಪ್ರಕರಣಗಳಿಗೆ ಒಟ್ಟು ೧೫,೪೮,೩೪೩ ರೂ ಪರಿಹಾರ ವಿತರಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಉತ್ತಮ ಮಳೆಯಿಂದಾಗಿ ಕೃಷಿ ಚಟುವಟಿಕೆ ಚುರುಕುಗೊಂಡಿವೆ. ರೈತರಿಗೆ ಅಗತ್ಯವಿರುವ ಭಿತ್ತನೆ ಬೀಜದ ದಾಸ್ತಾನು ಇಟ್ಟುಕೊಂಡು ಯಾವುದೇ ರೀತಿಯ ಕೊರತೆಯಾಗದಂತೆ ವಿತರಣೆಗೆ ಕ್ರಮ ಕೈಗೊಳ್ಳಬೇಕು. ರಸಗೊಬ್ಬರ ದಾಸ್ತಾನು ಇರುವಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಕೃಷಿ ಇಲಾಖೆ ಅಧಿಕಾರಿ ಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ತುರ್ತು ಕಾಯಾಚರಣೆಗಳನ್ನು ಕೈಗೊಳ್ಳಲು ಅಗತ್ಯವಿರುವ ಬೋಟುಗಳು ಸೇರಿದಂತೆ ಅಗತ್ಯ ಪರಿಕರಗಳನ್ನು ಖರೀದಿಸಲು ಹಾಗೂ ನೆರೆ ಸಂತ್ರಸ್ಥರಿಗೆ ಅನುಕೂಲವಾಗುವಂತೆ ಕಾಳಜಿ ಕೇಂದ್ರಗಳನ್ನು ತೆರೆಯಲು ಸೂಕ್ತ ಸ್ಥಳಗಳನ್ನು ಗುರುತಿಸಿಕೊಳ್ಳಬೇಕು ಎಂದೂ ಅವರು ಸೂಚನೆಗಳನ್ನು ನೀಡಿದರು.
ಮಳೆ-ಗಾಳಿಯಿಂದ ವಿದ್ಯುತ್ ಕಂಬಗಳು ಹಾಗೂ ಪ್ರಸರಣ ತಂತಿಗಳಿಗೆ ಹಾನಿ ಉಂಟಾದಾಗ ಕೂಡಲೇ ದುರಸ್ತಿ ಕಾರ್ಯಗಳನ್ನು ಕೈಗೊಂಡು ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದ ಅವರು, ತುಂಡಾದ ವಿದ್ಯುತ್ ತಂತಿಗಳನ್ನು ಸಾರ್ವಜನಿಕರು ಮುಟ್ಟದಂತೆ ವ್ಯಾಪಕ ಪ್ರಚಾರ ನೀಡುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಪಂ ಸಿಇಓ ಪ್ರಸನ್ನ ಹೆಚ್., ಕರಾವಳಿ ಕಾವಲು ಪಡೆಯ ಎಸ್ಪಿ ಅಂಶುಕುಮಾರ್, ಅಪರ ಜಿಲ್ಲಾಧಿಕಾರಿ ವೀಣಾ, ಎಎಸ್ಪಿ ಸಿದ್ದಲಿಂಗಪ್ಪ, ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ತಕ್ಷಣ ಸ್ಪಂದಿಸಲು ಕಂಟ್ರೋಲ್ ರೂಮ್
ವಿಕೋಪಗಳಿಂದ ತೊಂದರೆ ಉಂಟಾದವರು ತಕ್ಷಣ ಸ್ಪಂದಿಸಲು ಅನುಕೂಲ ವಾಗುವಂತೆ ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಉಚಿತ ಸಹಾಯವಾಣಿ ಸಂಖ್ಯೆ ೧೦೭೭, ಮೆಸ್ಕಾಂಗೆ ಸಂಬಂದಪಟ್ಟ ಸಮಸ್ಯೆಗಳಿಗೆ ಸಹಾಯವಾಣಿ ಸಂಖ್ಯೆ ೧೯೧೨, ಅಲ್ಲದೇ ರಕ್ಷಣೆಗೆ ಸಂಬಂಧಿಸಿದಂತೆ ಸಹಾಯವಾಣಿ ಸಂಖ್ಯೆ ೧೧೨ಕ್ಕೆ ಸಾರ್ವಜನಿಕರು ಕರೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದರು.