ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಲು ಸಮೀಕ್ಷೆ: ಡಿಸಿ ಕೂರ್ಮಾರಾವ್

Update: 2022-06-12 11:59 GMT

ಉಡುಪಿ : ಜಿಲ್ಲೆಯಲ್ಲಿ ಬಾಲ ಕಾರ್ಮಿಕರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯಿಂದ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು, ಪತ್ತೆ ಯಾದ ಬಾಲ ಕಾರ್ಮಿಕರಿಗೆ ಸೂಕ್ತ ಪುರ್ನವಸತಿ ಮತ್ತು ಶಿಕ್ಷಣ ನೀಡಲಾಗು ವುದು. ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ಬಾಲ ಕಾರ್ಮಿಕರು ಕಂಡುಬಂದರೆ ಸಾರ್ವಜನಿಕರು ತಕ್ಷಣವೇ ಉಚಿತ ಸಹಾಯವಾಣಿ ಸಂಖ್ಯೆ ೧೦೯೮ ಮಾಹಿತಿ ನೀಡಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಲಾದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳನ್ನು ಪತ್ತೆ ಹಚ್ಚಿ, ಅವರನ್ನು ದುಡಿಮೆಯಿಂದ ಮುಕ್ತಗೊಳಿಸಬೇಕು. ಅವರಿಗೆ ಸೂಕ್ತ ಪುರ್ನವಸತಿ ಕಲ್ಪಿಸಿ, ಶಿಕ್ಷಣಕ್ಕೆ ಸಕಲ ವ್ಯವಸ್ಥೆಗಳನ್ನು ಒದಗಿಸುವ ಮೂಲಕ ಬಾಲ ಕಾರ್ಮಿಕ ಪದ್ದತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಅವರು ತಿಳಿಸಿದರು.

ಪೋಷಕರು ತಮ್ಮ ಮಕ್ಕಳನ್ನು ಬಾಲ ಕಾರ್ಮಿಕರನ್ನಾಗಿಸದೇ ಅವರ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಬೇಕು. ಅವರ ಬಾಲ್ಯದ ಹಕ್ಕುಗಳನ್ನು ರಕ್ಷಿಸಿ, ಅವರ ಕಣ್ಣುಗಳಲ್ಲಿ ಬಾಲ್ಯದ ಮುಗ್ಧತೆ ಮೂಡಿಸಬೇಕು. ಮಕ್ಕಳಲ್ಲಿ ಸಮಾಜದ ಬಗ್ಗೆ ಭಯದ ವಾತಾವರಣದ ಬದಲು ನಂಬಿಕೆಯನ್ನು ಮೂಡಿಸುವುದು ಪ್ರತಿ ಯೊಬ್ಬರ ಜವಾಬ್ದಾರಿಯಾಗಿದೆ. ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದರು.

ಬಾಲ ಕಾರ್ಮಿಕ ಪದ್ದತಿ ವಿರೋಧ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಮಾತನಾಡಿ, ಬಾಲ ಕಾರ್ಮಿಕರನ್ನು ನೇಮಿಸಿ ಕೊಳ್ಳುವುದು ಕಾನೂನು ಪ್ರಕಾರ ಅಪರಾಧವಾಗಿದ್ದು, ಇದಕ್ಕಾಗಿ ೨೦,೦೦೦ರಿಂದ ೫೦,೦೦೦ರೂ. ವರೆಗೆ ದಂಡ,  ೬ ತಿಂಗಳಿನಿಂದ ೨ ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಈ ಎರಡನ್ನೂ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಮಾಹಿತಿ ನೀಡಿದರು.

ಕರಾವಳಿ ಅಭಿವೃಧ್ದಿ ಪ್ರಾದಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿದರು. ಅಧ್ಯಕ್ಷತೆಯನ್ನು ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ವಹಿಸಿದ್ದರು. ಈ ಹಿಂದೆ ಬಾಲ ಕಾರ್ಮಿಕರಾಗಿದ್ದು ಪ್ರಸ್ತುತ ಶಿಕ್ಷಣ ಪಡೆಯುತ್ತಿರುವ ಮಕ್ಕಳಿಗೆ ಶೈಕ್ಷಣಿಕ ಪರಿಕಗಳನ್ನು ಹಸ್ತಾಂತರಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವೀಣಾ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ ನಾಯಕ್ ಉಪಸ್ಥಿತರಿದ್ದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಕಾರ್ಮಿಕ ನಿರೀಕ್ಷಕ ರಾಜಶೇಖರ ರೆಡ್ಡಿ ವಂದಿಸಿದರು.

ಬಳಿಕ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಕಾರ್ಯಕ್ರಮ ಮತ್ತು ಎಂಎಸ್‌ಡಬ್ಲ್ಯೂ ಕಾಲೇಜು ವಿದ್ಯಾರ್ಥಿಗಳಿಂದ ಅರಿವು ಮೂಡಿಸುವ ಮೂಕಾ ಭಿನಯ ಪ್ರದರ್ಶನ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News