ಕಾಂಗ್ರೆಸ್ ನಾಯಕರ ವಿರುದ್ಧ ಈ.ಡಿ. ದುರ್ಬಳಕೆ ಆರೋಪ: ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಯತ್ನ
ಉಡುಪಿ, ಜೂ.17: ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಕೇಸ್ ಮೂಲಕ ಈ.ಡಿ. ಸಂಸ್ಥೆಯ ದುರ್ಬಳ ಹಾಗೂ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದ ಪ್ರತಿಭಟನಾಕಾರರನ್ನು ಪೊಲೀಸರು ತಡೆ ಹಿಡಿದರು.
ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಹೊರಟ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆಯಿತು. ಬಳಿಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಗೇಟಿನ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣದೊಳಗೆ ನುಗ್ಗಲು ಯತ್ನಿಸಿದರು. ಆದರೆ ಪೊಲೀಸರು ಗೇಟು ಹಾಕಿ ಪ್ರತಿಭಟನಾಕಾರರನ್ನು ಒಳ ಪ್ರವೇಶಿಸಿದಂತೆ ತಡೆದರು.
ಬಿಜೆಪಿ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಗೇಟು ಹತ್ತಿ ಒಳಪ್ರವೇಶಿಸಲು ಯತ್ನಿಸಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಅಪರ ಜಿಲ್ಲಾಧಿಕಾರಿ ವೀಣಾ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಕೆ.ಅಭಯಚಂದ್ರ ಜೈನ್, ವಿನಯಕುಮಾರ್ ಸೊರಕೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಮುಖಂಡರಾದ ರಮೇಶ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ, ರೋಶಿನಿ ಒಲಿವೇರ, ಪ್ರಖ್ಯಾತ್ ಶೆಟ್ಟಿ, ದೀಪಕ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.