ಕುರ್ಕಾಲುವಿನಿಂದ ಕಾಪುವಿಗೆ ಕುಡಿಯುವ ನೀರು ಪೂರೈಕೆ ಕಾಮಗಾರಿ ಪ್ರಗತಿಯಲ್ಲಿದೆ: ಲಾಲಾಜಿ ಮೆಂಡನ್

Update: 2022-06-28 17:31 GMT

ಪಡುಬಿದ್ರಿ: 56 ಕೋಟಿ ರೂಪಾಯಿ ವೆಚ್ಚದಲ್ಲಿ ಕುರ್ಕಾಲು ಅಣೆಕಟ್ಟೆಯಿಂದ ನಿಂದ ಕಾಪು ನಗರಕ್ಕೆ ಕುಡಿಯುವ ನೀರು ಪೂರೈಕೆ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಶಾಸಕ ಲಾಲಾಜಿ ಆರ್ ಮೆಂಡನ್ ಹೇಳಿದರು. 

ಕಾಪು ಪುರಸಭೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಕಾಪು ಪುರಸಭೆ ಹಾಗೂ ತಾಲೂಕಿನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ಬೆಳಪು ಅತ್ಯಾಧುನಿಕ ವಿಜ್ಞಾನ ತಂತ್ರಜ್ಞಾನ ಕೇಂದ್ರದ ಕಾಮಗಾರಿ ಪ್ರಗತಿಯಲ್ಲಿದ್ದು, ಹೆಚ್ಚುವರಿ 15 ಕೋಟಿ ರೂ. ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಟಾಟಾ ಕಂಪೆನಿ ಸಿಎಸ್‍ಆರ್‍ನಡಿ ಕಾಪು ಕ್ಷೇತ್ರದ ಐಟಿಐ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ, ಪೊಲಿಪು ಮತ್ತು ಮೂಳೂರಿನಲ್ಲಿ ಕಡಲ್ಕೊರೆತ ತಡೆ ಕಾಮಗಾರಿ ಪ್ರಗತಿಯಲ್ಲಿದೆ. ಕಾಪು ಪುರಸಭೆಗೆ ನಗರೋತ್ಥಾನ ಯೋಜನೆಯಡಿ 10 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಟೆಂಡರ್ ಹಂತದಲ್ಲಿದೆ ಎಂದು ವಿವರಿಸಿದರು.

ವಿತರಣೆ: ಜಿಲ್ಲಾ ಅಂಗವಿಕಲ ಕಲ್ಯಾಣಾಭಿವೃದ್ಧಿ ಇಲಾಖೆಯಿಂದ 9 ಫಲಾನುಭವಿಗಳಿಗೆ ಶ್ರವಣ ಶಕ್ತಿ ಸಾಧನ ಹಾಗೂ 2 ಜನರಿಗೆ ಹೊಲಿಗೆಯಂತ್ರ, ಜಿಲ್ಲಾ ವಿಪತ್ತು ಪರಿಹಾರ ನಿಧಿಯಿಂದ 6 ಫಲಾನುಭವಿಗಳಿಗೆ ಚೆಕ್, ರಾಜೀವ್‍ಗಾಂಧಿ ವಸತಿ ಯೋಜನೆಯ 16 ಮಂದಿಗೆ ವಸತಿ ಹಾಗೂ ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಲಾಯಿತು.

ಕಾಪು ತಹಸೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಕಾಪು ಯೋಜನಾ ಪ್ರಾಧಿಕಾರ ಅಧ್ಯಕ್ಷ ಸುಧಾಮ ಶೆಟ್ಟಿ, ಅಂಗವಿಕಲ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರತ್ನಾ ಸುವರ್ಣ, ಪುರಸಭೆ ಸದಸ್ಯರು, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ ಸ್ವಾಗತಿಸಿದರು. ರವಿಪ್ರಕಾಶ್ ನಿರೂಪಿಸಿದರು. ಮಾಲತಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News