ಬಿಜೆಪಿ ನಾಯಕರು ತಿರುಗಾಡದಂತೆ ಮಾಡುವ ಶಕ್ತಿ ಕಾಂಗ್ರೆಸ್‍ಗೆ ಇದೆ: ಸಿದ್ದರಾಮಯ್ಯ

Update: 2022-09-30 12:37 GMT

ಬೆಂಗಳೂರು, ಸೆ.30: ‘ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ ಐಕ್ಯತಾ ಯಾತ್ರೆ ಯಶಸ್ವಿಯಾಗಿ ಸಾಗುತ್ತಿದ್ದು, ಇದನ್ನು ಬಿಜೆಪಿಯವರಿಂದ ಸಹಿಸಲು ಸಾಧ್ಯವಾಗುತ್ತಿಲ್ಲ. ನಮ್ಮ ಪೋಸ್ಟರ್, ಫ್ಲೆಕ್ಸ್ ಹರಿಯುತ್ತಿದ್ದಾರೆ. ಅವರು ಇದೇ ರೀತಿ ಮುಂದುವರಿಸಿದರೆ ಬಿಜೆಪಿಯ ಯಾವುದೇ ನಾಯಕರು ರಾಜ್ಯದಲ್ಲಿ ತಿರುಗಾಡದಂತೆ ಮಾಡುವ ಶಕ್ತಿ ಕಾಂಗ್ರೆಸ್ ಕಾರ್ಯಕರ್ತರಿಗಿದೆ' ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ. 

ಶುಕ್ರವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ‘ಭಾರತ ಐಕ್ಯತಾ ಯಾತ್ರೆ’ಯ ಆಗಮನದ ಹಿನ್ನೆಲೆಯಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು,‘ಇನ್ನು ಆರು ತಿಂಗಳ ನಂತರ ರಾಜ್ಯದಲ್ಲಿ ಸರಕಾರ ಬದಲಾಗುತ್ತದೆ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ಕೆಲವು ಪೊಲೀಸರಿಗೆ ಹೇಳಲು ಬಯಸುತ್ತೇನೆ, ನೀವು ಅವರ (ಬಿಜೆಪಿ)ಜತೆ ಶಾಮೀಲಾದರೆ ನಿಮಗೆ ತಕ್ಕ ಪಾಠ ಕಲಿಸುವ ಕಾಲ ಬರಲಿದೆ' ಎಂದು ಗುಡುಗಿದರು.

‘ರಾಹುಲ್ ಗಾಂಧಿ ಈಗಾಗಲೇ ಕೇರಳ ಹಾಗೂ ತಮಿಳುನಾಡಿನಲ್ಲಿ ಪಾದಯಾತ್ರೆ ಮುಗಿಸಿ ಇಂದು ನಮ್ಮ ರಾಜ್ಯದ ಗುಂಡ್ಲುಪೇಟೆ ಮೂಲಕ ಪಾದಯಾತ್ರೆ ಆರಂಭಿಸುತ್ತಿದ್ದಾರೆ. ರಾಜ್ಯದಲ್ಲಿ 8 ಜಿಲ್ಲೆಗಳಲ್ಲಿ 510 ಕಿ.ಮೀ ಪಾದಯಾತ್ರೆ ಮಾಡಲಿದ್ದಾರೆ. ಇಡೀ ದೇಶದಲ್ಲಿ ಸುಮಾರು 3,570 ಕಿ.ಮೀ ಪಾದಯಾತ್ರೆ ಮಾಡುತ್ತಿದ್ದಾರೆ. ‘ಸ್ವಾತಂತ್ರ್ಯದ ನಂತರ ಇಷ್ಟು ದೊಡ್ಡ ಪ್ರಮಾಣದ ಪಾದಯಾತ್ರೆ ಮಾಡುತ್ತಿರುವುದು ಇದೇ ಮೊದಲು. ಬೇರೆ ಯಾವ ಪಕ್ಷಗಳು ಅಥವಾ ನಾಯಕರು ಈ ರೀತಿ ಮಾಡಿಲ್ಲ ಎಂದರೆ ಅತಿಶಯೋಕ್ತಿಯಲ್ಲ' ಎಂದು ಅವರು ತಿಳಿಸಿದರು.

‘ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಧರ್ಮ ರಾಜಕಾರಣ, ಕೋಮುವಾದಿ ರಾಜಕಾರಣ, ದ್ವೇಷದ ರಾಜಕಾರಣ ಮಾಡಲು ಆರಂಭಿಸಿದ್ದಾರೆ. ಇಂದು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ರೈತರು, ಮಹಿಳೆಯರು ಎಲ್ಲ ವರ್ಗದವರು ಆತಂಕದಿಂದ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ' ಎಂದು ಅವರು ಟೀಕಿಸಿದರು.

‘ಬಿಜೆಪಿ ಪ್ರಜಾಪ್ರಭುತ್ವ, ಸಂವಿಧಾನದ ಮೇಲೆ ನಂಬಿಕೆ ಗೌರವ ಇಟ್ಟುಕೊಂಡಿಲ್ಲ. ಅವರು, ಒಬ್ಬ ನಾಯಕ, ಒಂದು ಸಿದ್ಧಾಂತ, ಒಂದು ಚಿಹ್ನೆ ಮೇಲೆ ನಂಬಿಕೆ ಇಟ್ಟುಕೊಂಡಿದ್ದಾರೆ. ದೇಶದಲ್ಲಿ ಶಾಂತಿ, ಸಾಮರಸ್ಯ ಇರಬಾರದು, ಧರ್ಮ, ಜಾತಿ ಆಧಾರದ ಮೇಲೆ ಜನರನ್ನು ವಿಭಜಿಸಿ ರಾಜಕೀಯ ಲಾಭ ಮಾಡುವುದು ಬಿಜೆಪಿ ಉದ್ದೇಶ. ಮೋದಿ ಪ್ರಧಾನಿ ಆದ ನಂತರ ದೇಶದಲ್ಲಿ ಇದು ಹೆಚ್ಚುತ್ತಿದೆ ಎಂದು ಸಿದ್ದರಾಮಯ್ಯ ಕಿಡಿಗಾರಿದರು.

ಪ್ರಜಾಪ್ರಭುತ್ವ, ಸಂವಿಧಾನ, ಜಾತ್ಯತೀತ ತತ್ವ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ನಾವೆಲ್ಲರೂ ಎಲ್ಲ ರೀತಿಯ ತ್ಯಾಗಕ್ಕೂ ಸಿದ್ಧರಾಗಿರಬೇಕು. ಅದಕ್ಕಾಗಿ ಇಂದು ಕೇವಲ ಕಾಂಗ್ರೆಸ್ ಪಕ್ಷ ಮಾತ್ರವಲ್ಲದೆ ನಾಗರಿಕ ವೇದಿಕೆಗಳು, ಬರಹಗಾರರು, ಚಿಂತಕರು, ರೈತ ಸಂಘಗಳು ಎಲ್ಲರೂ ದೇಶ ಉಳಿಸಲು ಹೋರಾಟ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ದೇಶದಲ್ಲಿ ಅಶಾಂತಿ ಜತೆಗೆ, ರೈತರು, ನಿರುದ್ಯೋಗ, ಭ್ರಷ್ಟಾಚಾರ, ಮಹಿಳೆಯರು, ಬೆಲೆ ಏರಿಕೆ ಸಮಸ್ಯೆ ವಿರುದ್ಧ ಹೋರಾಡಲು ಈ ಪಾದಯಾತ್ರೆ ಮಾಡಲಾಗುತ್ತಿದೆ. ರಾಜ್ಯದಲ್ಲಿರುವ ಬಿಜೆಪಿ ಸರಕಾರ ‘40 ಪರ್ಸೆಂಟ್ ಸರಕಾರ’ ಎಂದು ಜನಜನಿತವಾಗಿದೆ. ಇಂದು ದೇಶ, ಪ್ರಜಾತಂತ್ರ, ಸಂವಿಧಾನ ಉಳಿಯಬೇಕಾದರೆ, ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಅನಿವಾರ್ಯವಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ‘ಇಂದು ದೇಶದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ. ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ 3570 ಕಿ.ಮೀ. ದೂರ ಹೆಜ್ಜೆ ಹಾಕುತ್ತಿದ್ದಾರೆ. ಈ ಹೆಜ್ಜೆ ರಾಷ್ಟ್ರಕ್ಕೆ ಕೊಡುಗೆ. ನಿಮ್ಮ ಹೆಜ್ಜೆ ಜತೆಗೆ ಒಂದು ಇತಿಹಾಸ ನಿರ್ಮಾಣವಾಗುತ್ತಿದೆ ಎಂದರು.

ದೇಶವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ನಿರ್ಮಾಣ ಮಾಡುವುದು, ಯುವಕರ ನಿರುದ್ಯೋಗ ಸಮಸ್ಯೆ ಪರಿಹಾರ, ರೈತರಿಗೆ ಗೌರವಯುತ ಆದಾಯ ಸಿಗುವಂತೆ ಮಾಡುವುದು, ರಾಜ್ಯದಲ್ಲಿನ ಭ್ರಷ್ಟಾಚಾರ ನಿರ್ಮೂಲನೆ, ಜನ ಸಾಮಾನ್ಯರ ಬದುಕು ನರಕ ಮಾಡಿರುವ ಬೆಲೆ ಏರಿಕೆ ಜತೆಗೆ ಜನರ ಆದಾಯ ಪಾತಾಳಕ್ಕೆ ಕುಸಿದು, ವೆಚ್ಚ ಆಕಾಶಕ್ಕೆ ಹೋಗುತ್ತಿರುವುದನ್ನು ತಡೆಯುವುದೇ ಈ ಯಾತ್ರೆಯ ಉದ್ದೇಶ ಆಗಿದೆ ಎಂದು ಶಿವಕುಮಾರ್ ಹೇಳಿದರು.

ಇತಿಹಾಸವನ್ನು ಯಾರೂ ಬದಲಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಕಾಂಗ್ರೆಸ್ ಯಾವತ್ತೂ ಅಧಿಕಾರದ ಬಗ್ಗೆ ಯೋಚಿಸುವುದಿಲ್ಲ, ಜನಸಾಮಾನ್ಯರ ಬದುಕಿನ ಬಗ್ಗೆ ಯೋಚಿಸುತ್ತದೆ. ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು. ಅವರಿಗೆ ಮೂರು ಬಾರಿ ದೇಶದ ಪ್ರಧಾನಿ ಆಗುವ ಅವಕಾಶವಿತ್ತು, ರಾಹುಲ್ ಗಾಂಧಿಗೆ ಎರಡು ಬಾರಿ ಅವಕಾಶವಿತ್ತು. ಆದರೆ ಅವರು ದೇಶಕ್ಕಾಗಿ ಅಧಿಕಾರವನ್ನು ತ್ಯಾಗ ಮಾಡಿದರು. ಇಂದು ಅವರು ಬರೀ ನಾಯಕರಾಗಿ ಹೆಜ್ಜೆ ಹಾಕುತ್ತಿಲ್ಲ, ನಿಮ್ಮ ಜತೆ ಸಾಮಾನ್ಯ ಕಾರ್ಯಕರ್ತರಂತೆ ಹೆಜ್ಜೆ ಹಾಕಿ ನಿಮ್ಮೆಲ್ಲರನ್ನು ಒಟ್ಟಿಗೆ ಕೊಂಡೊಯ್ಯುತ್ತಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ಹತ್ತಿಕ್ಕಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ನಾವು ಯಾವುದಕ್ಕೂ ಹೆದರುವುದಿಲ್ಲ. ನಿಮ್ಮ ಬದುಕು ರಕ್ಷಿಸಿ, ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಲು ಕಾಂಗ್ರೆಸ್ ಅವಿರತ ಶ್ರಮಿಸಲಿದೆ ಎಂದು ಅವರು ತಿಳಿಸಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News