SC, ST ಮೀಸಲಾತಿ ಪ್ರಮಾಣ ಹೆಚ್ಚಳ; ಆದೇಶದ ಮೂಲಕ ಜಾರಿ ಮಾಡುತ್ತೇವೆ: ಸಚಿವ ಮಾಧುಸ್ವಾಮಿ
ಬೆಂಗಳೂರು, ಅ. 8: ‘ಪರಿಶಿಷ್ಟ ಜಾತಿ(ಎಸ್ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್ಟಿ) ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ.17 ಮತ್ತು ಶೇ.7ರಷ್ಟು ಹೆಚ್ಚಳ ಮಾಡುವ ತೀರ್ಮಾನವನ್ನು ಶೀಘ್ರದಲ್ಲೆ ಸರಕಾರಿ ಆದೇಶ ಹೊರಡಿಸುವ ಮೂಲಕ ಅನುಷ್ಠಾನಕ್ಕೆ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಶನಿವಾರ ವಿಧಾನಸೌಧದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಸಂಬಂಧಿಸಿದಂತೆ ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಸಮಿತಿ ನೀಡಿರುವ ವರದಿಯನ್ನು ಯಥಾವತ್ತಾಗಿ ಒಪ್ಪಿಕೊಳ್ಳಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ' ಎಂದು ತಿಳಿಸಿದರು.
‘ಪರಿಶಿಷ್ಟ ಜಾತಿಗೆ ಶೇ.15ರಿಂದ ಶೇ.17ಕ್ಕೆ, ಪರಿಶಿಷ್ಟ ಪಂಗಡಕ್ಕೆ ಶೇ.3ರಿಂದ ಶೇ.7ಕ್ಕೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ನಿನ್ನೆ ಉಭಯ ಸದನ ನಾಯಕರ ಸಭೆಯಲ್ಲಿ ತೀರ್ಮಾನ ಮಾಡಿದ್ದು, ಆ ನಿರ್ಧಾರವನ್ನು ಸರಕಾರಿ ಆದೇಶದ ಮೂಲಕ ಅನುಷ್ಠಾನಗೊಳಿಸಲಾಗುವುದು. ಮೀಸಲಾತಿ ಹೆಚ್ಚಳ, ಯಾವ ಸಮುದಾಯಗಳ ಮೀಸಲಾತಿ ಕಡಿತವಾಗಲಿದೆ, ಯಾವ ರೀತಿಯಲ್ಲಿ ಅನುಷ್ಠಾನ ಮಾಡಲಾಗುವುದೆಂಬ ಬಗ್ಗೆ ಒಂದೆರಡು ದಿನಗಳಲ್ಲಿ ಆದೇಶ ಹೊರಡಿಸಲಿದ್ದು, ಅದರಲ್ಲಿ ಎಲ್ಲ ವಿವರಗಳನ್ನು ಪ್ರಕಟಿಸಲಾಗುವುದು' ಎಂದು ಮಾಧುಸ್ವಾಮಿ ವಿವರಿಸಿದರು.
ಒಳ ಮೀಸಲಾತಿ-ಸಮಿತಿ ರಚನೆ: ‘ನ್ಯಾ.ನಾಗಮೋಹನ್ ದಾಸ್ ಸಮಿತಿ ಶಿಫಾರಸ್ಸಿನಂತೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಅಧ್ಯಯನ ಮಾಡಿ, ಪ್ರಸ್ತಾವ ಸಿದ್ದಪಡಿಸಲು ನನ್ನ ಅಧ್ಯಕ್ಷತೆಯಲ್ಲಿ ಕಾನೂನು ಇಲಾಖೆಗೆ ಜವಾಬ್ದಾರಿ ವಹಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ' ಎಂದು ಮಾಧುಸ್ವಾಮಿ ತಿಳಿಸಿದರು.
‘ಎಸ್ಸಿ-ಎಸ್ಟಿಗಳಿಗೆ ಮೀಸಲಾತಿ ಪ್ರಮಾಣ ಹೆಚ್ಚಳ ಸಂಬಂಧ ಆದೇಶ ಹೊರಡಿಸಿ, ಶಿಕ್ಷಣ ಮತ್ತು ಉದ್ಯೋಗ ಕಲ್ಪಿಸಲು ಕ್ರಮ ವಹಿಸಲಾಗುವುದು. ಸದ್ಯಕ್ಕೆ ಕಾನೂನು ರಚನೆ ಪ್ರಶ್ನೆ ಉದ್ಭವಿಸುವುದಿಲ್ಲ. ಲಿಂಗಾಯತ ಪಂಚಮಸಾಲಿ, ಪರಿಶಿಷ್ಟ ಪಂಗಡಕ್ಕೆ ಇತರೆ ಸಮುದಾಯಗಳ ಸೇರ್ಪಡೆ ಬಗ್ಗೆ ಪರಿಶೀಲಿಸಿ ಸೂಕ್ತ ತೀರ್ಮಾನ ಮಾಡಲಾಗುವುದು' ಎಂದು ಅವರು ಸ್ಪಷ್ಟಪಡಿಸಿದರು.
‘ಒಟ್ಟಾರೆ ಮೀಸಲಾತಿ ಪ್ರಮಾಣ ಶೇ.50ರ ಮಿತಿ ಮೀರಬಾರದು ಎಂದು ಸುಪ್ರೀಂ ಕೋರ್ಟ್ ಷರತ್ತು ವಿಧಿಸಿದೆ. ಆದರೆ, ತಮಿಳುನಾಡಿನಲ್ಲಿ ಶೇ.69 ಮತ್ತು ಉತ್ತರ ಪ್ರದೇಶದಲ್ಲಿ ಶೇ.60ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಇನ್ನೂ ಕೆಲ ರಾಜ್ಯಗಳು ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಿವೆ. ಈ ಮಧ್ಯೆ ಕೇಂದ್ರ ಸರಕಾರವೂ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿ ಕಲ್ಪಿಸಿರುವುದರಿಂದ ಒಟ್ಟು ಮೀಸಲಾತಿ ಪ್ರಮಾಣ ಶೇ.60ಕ್ಕೆ ಹೆಚ್ಚಳವಾಗಿದೆ. ಈ ಸಂಬಂಧ ಪ್ರಮಾಣ ಸುಪ್ರೀಂ ಕೋರ್ಟ್‍ನಲ್ಲಿದೆ' ಎಂದು ಅವರು ಮಾಹಿತಿ ನೀಡಿದರು.
‘ಯಾವುದೇ ಒಂದು ವರ್ಗಕ್ಕೆ ಮೀಸಲಾತಿ ಕಲ್ಪಿಸುವುದು ಅಥವಾ ಹೆಚ್ಚಳ ಮಾಡಲು ವೈಜ್ಞಾನಿಕ ಅಧ್ಯಯನ ಮತ್ತು ಸೂಕ್ತ ಶಿಫಾರಸು ಅಗತ್ಯ. ಇಲ್ಲವಾದರೆ, ಮೀಸಲಾತಿ ಬದಲಾವಣೆ ಅಸಾಧ್ಯ. ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳ ಸಂಬಂಧ ಹಲವು ಸಮಿತಿಗಳ ವರದಿಗಳಿವೆ. ಹೀಗಾಗಿ ಆ ವರ್ಗಕ್ಕೆ ನ್ಯಾಯ ಒದಗಿಸಲು ಸರಕಾರ ಈ ತೀರ್ಮಾನವನ್ನು ಮಾಡಿದೆ' ಎಂದು ಮಾಧುಸ್ವಾಮಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಚಿವರಾದ ಶ್ರೀರಾಮುಲು, ಬಿ.ಸಿ.ನಾಗೇಶ್ ಹಾಜರಿದ್ದರು.
‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ.17 ಮತ್ತು ಶೇ.7ಕ್ಕೆ ಹೆಚ್ಚಿಸಬೇಕೆಂದು ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ನೀಡಿದ್ದು, ಅದರನ್ವಯ ಸರಕಾರ ಆ ಸಮುದಾಯಗಳ ಮೀಸಲಾತಿ ಪ್ರಮಾಣ ಹೆಚ್ಚಿಸಿದ್ದು, ನಾವು ಆ ಸಮುದಾಯಗಳಿಗೆ ನೀಡಿದ್ದ ಭರವಸೆಯನ್ನು ಈಡೇರಿಸಿದ್ದೇವೆ'
-ಜೆ.ಸಿ.ಮಾಧುಸ್ವಾಮಿ ಕಾನೂನು ಸಚಿವ