ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಸಚಿವ ಸೋಮಣ್ಣ ವಿರುದ್ಧ ತನಿಖೆಗೆ ಕೋರ್ಟ್ ಸೂಚನೆ

Update: 2022-10-12 15:44 GMT

ಬೆಂಗಳೂರು, ಅ.12: ಆದಾಯ ಮೀರಿದ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪ ಸಂಬಂಧ ವಸತಿ ಸಚಿವ ವಿ.ಸೋಮಣ್ಣ ಅವರ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆ ನೀಡಿದೆ.

ಸಚಿವ ಸೋಮಣ್ಣ ವಿರುದ್ಧದ ಆರೋಪ ಸಂಬಂಧ ಹೈಕೋರ್ಟ್ ನಿರ್ದೇಶನದ ಮೇರೆಗೆ  ಮರು ವಿಚಾರಣೆ ಪ್ರಾರಂಭಿಸಿರುವ ಜನಪ್ರತಿನಿಧಿಗಳ ಕೋರ್ಟ್, ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಡಿಸೆಂಬರ್ ತಿಂಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದೆ. 

ಮೂಡಲಪಾಳ್ಯದ ರಾಮಕೃಷ್ಣ ಎಂಬುವವರು 2012ರಲ್ಲಿ ಸೋಮಣ್ಣ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತ ಕೋರ್ಟ್‍ನಲ್ಲಿ ಖಾಸಗಿ ದೂರು ದಾಖಲಿಸಿ ತನಿಖೆ ನಡೆಸುವಂತೆ ಕೋರಿದ್ದರು. ಈ ಸಂಬಂಧ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಆರೋಪದಲ್ಲಿ ಹುರಳಿಲ್ಲ ಎಂದು ತಿಳಿಸಿ ಬಿ ರಿಪೋರ್ಟ್ ಸಲ್ಲಿಸಿದ್ದರು.

ಪ್ರಕರಣದ ತನಿಖೆ ಅಸಮರ್ಪಕವಾಗಿದೆ ಎಂದು ಅಭಿಪ್ರಾಯಪಟ್ಟಿದ್ದ ಲೋಕಾಯುಕ್ತ ನ್ಯಾಯಾಲಯ ಬಿ. ರಿಪೋರ್ಟ್ ಅನ್ನು ರದ್ದುಗೊಳಿಸಿತ್ತು. ಈ ಅಂಶವನ್ನು ದೂರುದಾರ ರಾಮಕೃಷ್ಣ ಅವರು ದಾಖಲೆಗಳೊಂದಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. 

ಅರ್ಜಿ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಸೋಮಣ್ಣ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ಸೋಮಣ್ಣ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಸೋಮಣ್ಣ ವಿರುದ್ಧದ ಜಾರಿಯಾಗಿದ್ದ ಸಮನ್ಸ್ ರದ್ದುಪಡಿಸಿತ್ತು. ಜೊತೆಗೆ ಮರು ವಿಚಾರಣೆಗೆ ಸೂಚನೆ ನೀಡಿತ್ತು. 

ದೂರು: ಸೋಮಣ್ಣ, ಸಾರ್ವಜನಿಕ ಸೇವಕರಾಗಿ ಅಕ್ರಮ ಸಂಪಾದನೆ ಮಾಡುವ ಮೂಲಕ ಕ್ರಿಮಿನಲ್ ದುರ್ನಡತೆ ತೋರಿದ್ದಾರೆ. ಇವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ- 1988ರ ಕಲಂ 13(1)(ಬಿ) (ಡಿ) ಮತ್ತು (ಇ) ಕಲಂ 13(2)ರ ಅಡಿ ಪ್ರಕರಣ ದಾಖಲಿಸಲು ಆದೇಶಿಸಬೇಕು ಎಂಬುದು ದೂರುದಾರ ಮೂಡಲಪಾಳ್ಯದ ರಾಮಕೃಷ್ಣ ಅವರ ಕೋರಿಕೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News