ಜ.6ರಿಂದ 8ರವರೆಗೆ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: ಸಚಿವ ವಿ.ಸುನಿಲ್ ಕುಮಾರ್

Update: 2022-10-12 16:47 GMT

ಬೆಂಗಳೂರು, ಅ.12: ಹಾವೇರಿಯಲ್ಲಿ ಮುಂದಿನ ವರ್ಷ ಜನವರಿ 6 ರಿಂದ 8ರ ವರೆಗೆ 86ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದ ಪೂರ್ವಭಾವಿ ಸಭೆ ನಡೆಸಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ಪಡೆದು ಸಾಹಿತ್ಯ ಸಮ್ಮೇಳನದ ದಿನಾಂಕವನ್ನು ಘೋಷಿಸಿದರು.

ಮೂರು ದಿನಗಳ ಕಾಲ ನಡೆಯಲಿರುವ ಈ ಸಮ್ಮೇಳನದಲ್ಲಿ ಸುಮಾರು 8 ರಿಂದ 10 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುತ್ತಿರುವ ಹಾವೇರಿ ಜಿಲ್ಲೆಯಲ್ಲಿ ನಡೆಯಲಿರುವ ಈ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ನಡೆಸಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಅವರು ಹೇಳಿದರು.

ಸಾಹಿತ್ಯ ಸಮ್ಮೇಳನ ಆಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಹಾಗೂ ಸ್ವಯಂ ಸೇವಕರ ಜತೆಗೆ ಚರ್ಚೆ ನಡೆಸಲು ಅ.20ರಂದು ಹಾವೇರಿಗೆ ತೆರಳಿ, ಸಮ್ಮೇಳನ ನಡೆಯಲಿರುವ ಸ್ಥಳ ಪರಿಶೀಲನೆ ನಡೆಸಲಾಗುವುದು. ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ಸಮ್ಮೇಳನ ಆಯೋಜನೆಗೊಳ್ಳಬೇಕು ಎಂಬುದು ನಮ್ಮ ಬಯಕೆ ಎಂದು ಸುನಿಲ್ ಕುಮಾರ್ ತಿಳಿಸಿದರು.

ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಇಡೀ ರಾಜ್ಯದಲ್ಲಿ 45 ದಿನ ‘ಕನ್ನಡ ರಥ’ದ ಮೆರವಣಿಗೆ ನಡೆಸಲಾಗುವುದು. ಸಮ್ಮೇಳನದಲ್ಲಿ ಭಾಗವಹಿಸುವ ಸುಮಾರು 30 ರಿಂದ 40 ಸಾವಿರ ಜನರಿಗೆ ವಸತಿ ವ್ಯವಸ್ಥೆ, ಪ್ರತಿ ದಿನ 2.50 ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುವುದು. ಜೊತೆಗೆ, ಇದು 86ನೆ ಸಾಹಿತ್ಯ ಸಮ್ಮೇಳನ ಆಗಿರುವುದರಿಂದ 86 ಮಂದಿ ಸಾಧಕರಿಗೆ ಸನ್ಮಾನಿಸಲಾಗುವುದು ಎಂದು ಅವರು ತಿಳಿಸಿದರು.

ಜ.6ರಂದು ನಡೆಯಲಿರುವ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಸುಮಾರು 50 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗುವುದು. ವಿವಿಧ ಗೋಷ್ಠಿಗಳು, ಪುಸ್ತಕ ಪ್ರದರ್ಶನ ಸೇರಿದಂತೆ ಸಾಹಿತ್ಯಕ್ಕೆ ಸಂಬಂಧಿಸಿದ ಅನೇಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗುವುದು. 20ಕ್ಕೂ ಹೆಚ್ಚು ಉಪ ಸಮಿತಿಗಳನ್ನು ರಚನೆ ಮಾಡಲಾಗುವುದು ಎಂದು ಸುನೀಲ್ ಕುಮಾರ್ ಹೇಳಿದರು. 

ಸಭೆಯಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ, ಶಾಸಕ ನೆಹರು ಓಲೇಕಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News