ವಕ್ಫ್ ಆಸ್ತಿ ಕಬಳಿಕೆ ಆರೋಪ | ಮಾಣಿಪ್ಪಾಡಿ ವರದಿ ಮಂಡನೆಗೆ ಸಚಿವ ಸಂಪುಟ ನಿರ್ಧಾರ: ಹೈಕೋರ್ಟ್ ಗೆ ಹೇಳಿಕೆ

Update: 2022-10-20 18:26 GMT

ಬೆಂಗಳೂರು, ಅ.20: ರಾಜ್ಯದಲ್ಲಿ ವಕ್ಫ್ ಆಸ್ತಿಗಳ ಕಬಳಿಕೆ ಹಾಗೂ ದುರ್ಬಳಕೆಗೆ ಸಂಬಂಧಿಸಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಸಲ್ಲಿಸಿರುವ ವಿಶೇಷ ವರದಿಯನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸುವ ಕುರಿತು ಸಂಪುಟದಲ್ಲಿ ನಿರ್ಧರಿಸಲಾಗಿದೆ ಎಂದು ಸರಕಾರ ಹೈಕೋರ್ಟ್‍ಗೆ ಮಾಹಿತಿ ನೀಡಿದೆ.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ವಕ್ಫ್ ಆಸ್ತಿ ದುರ್ಬಳಕೆಗೆ ಸಂಬಂಧಿಸಿ 2012ರಲ್ಲಿ ಸಲ್ಲಿಸಿರುವ ವಿಶೇಷ ವರದಿ ಆಧರಿಸಿ ಬೀದರ್ ಸಹಿತ ರಾಜ್ಯದ ಎಲ್ಲ ಜಿಲ್ಲೆಗಳ ವಕ್ಫ್ ಆಸ್ತಿಗಳ ಕಬಳಿಕೆ ಹಾಗೂ ದುರ್ಬಳಕೆಯನ್ನು ಸಿಬಿಐ ತನಿಖೆಗೆ ವಹಿಸುವಂತೆ ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಮಾಜಿ ಸಚಿವ ಎಸ್.ಕೆ.ಕಾಂತಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಲೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ಸರಕಾರದ ಪರ ವಕೀಲರು,  ರಾಜ್ಯ ಸಚಿವ ಸಂಪುಟ 2022ರ ಸೆ.21ರಂದು ತೀರ್ಮಾನ ತೆಗೆದುಕೊಂಡಿದೆ ಎಂದು ಪೀಠಕ್ಕೆ ತಿಳಿಸಿದರು.   

ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಿದ ನಂತರ ವಿಶೇಷ ವರದಿ ಮೇಲೆ ಮಂದಿನ ತೀರ್ಮಾನ ತೆಗೆದುಕೊಳ್ಳುವ ನಿರೀಕ್ಷೆ ಇದೆ. ಅದರಂತೆ ಸರಕಾರ ತೀರ್ಮಾನ ಕೈಗೊಂಡ ನಂತರ ಆ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗುವುದು. ಅದಕ್ಕಾಗಿ ನಾಲ್ಕು ವಾರ ಕಾಲಾವಕಾಶ ನೀಡಬೇಕು ಎಂದು ಸರಕಾರದ ಪರ ವಕೀಲರು ಪೀಠಕ್ಕೆ ಮನವಿ ಮಾಡಿದರು. ಆ ಮನವಿ ಪುರಸ್ಕರಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿಕೆ ಮಾಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News