ಪಕ್ಷದ ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಆಹ್ವಾನ, 2 ಲಕ್ಷ ರೂ.ಡಿಡಿ: KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್

ವಿಧಾನಸಭೆ ಚುನಾವಣೆ

Update: 2022-11-02 13:11 GMT

ಬೆಂಗಳೂರು, ನ. 2: ‘ಕಾಂಗ್ರೆಸ್ ಪಕ್ಷ ಮುಂದಿನ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿದ್ದು, ಪಕ್ಷದಿಂದ ಟಿಕೆಟ್ ಬಯಸಿರುವವರು ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿದೆ. ನ.5ರಿಂದ 15ರ ವರೆಗೆ ಅರ್ಜಿ ಸಲ್ಲಿಸಬಹುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಅರ್ಜಿಗೆ 5 ಸಾವಿರ ರೂ. ಶುಲ್ಕ, ಅರ್ಜಿ ಸಲ್ಲಿಸುವಾಗ ಸಾಮಾನ್ಯ ವರ್ಗದವರು 2 ಲಕ್ಷ ರೂ.ಡಿಡಿ, ಕಾಂಗ್ರೆಸ್ ಸದಸ್ಯತ್ವ ವಿವರ ಲಗತ್ತಿಸಬೇಕು. ಪರಿಶಿಷ್ಟ ವರ್ಗದವರಿಗೆ ಶೇ.50ರಷ್ಟು ವಿನಾಯಿತಿ ನೀಡಲಾಗಿದೆ. ಈ ಹಣ ಪಕ್ಷದ ಕಟ್ಟಡ ಕಾಮಗಾರಿ ನಿಧಿಗೆ ಜಮೆ ಆಗಲಿದೆ’ ಎಂದು ಹೇಳಿದರು.

ನೋಂದಣಿ ಆರಂಭ: ‘2023ರ ಚುನಾವಣೆಯಲ್ಲಿ ಹಾಲಿ ಶಾಸಕರ ಸಮೇತ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು. ನಾನು ಚುನಾವಣೆಯಲ್ಲಿ ಸ್ಪರ್ಧಿಸಲು ಈ ಅರ್ಜಿ ಹಾಕಬೇಕು. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ. ಹಲವು ಮಂದಿ ಕಾಂಗ್ರೆಸ್ ಸದಸ್ಯತ್ವ ಪಡೆಯಲು ಉತ್ಸುಕರಾಗಿರುವ ಹಿನ್ನೆಲೆಯಲ್ಲಿ ಪಕ್ಷ ಮತ್ತೆ ಆನ್‍ಲೈನ್ ಮೂಲಕ ನೋಂದಣಿ ಆರಂಭಿಸಿದ್ದೇವೆ’ ಎಂದರು.

ಟಿಕೆಟ್‍ಗೆ ಹಣ ನೀಡುವ ಬಗ್ಗೆ ಯಾವುದೇ ಮಾನದಂಡವಿಲ್ಲ. ನಾವು ಪಕ್ಷದ ಕಟ್ಟಡ, ಪಕ್ಷದ ನಿಧಿ, ಚುನಾವಣಾ ಪ್ರಚಾರ, ಜಾಹೀರಾತು ನೀಡಲು ಹಣ ಬೇಕಿದೆ. ಪತ್ರಕರ್ತರಿಗೆ ಹಣ ನೀಡುವುದಿಲ್ಲ. ಮುಖಪುಟದ ಜಾಹೀರಾತು ನೀಡಲು ನಮ್ಮ ಬಳಿ ಸರಕಾರ ಇಲ್ಲ. ಪಕ್ಷಕ್ಕೆ 20 ಸಾವಿರಕ್ಕಿಂತ ಹೆಚ್ಚಿನ ನಗದು ಪಡೆಯುವಂತಿಲ್ಲ. ನಮಗೆ ಯಾವುದೇ ಚುನಾವಣಾ ಬಾಂಡ್ ಬರುತ್ತಿಲ್ಲ. ಎಲ್ಲ ಬಿಜೆಪಿಗೆ ಹೋಗುತ್ತಿದೆ. ಹೀಗಾಗಿ ಕಾರ್ಯಕರ್ತರಾದರೂ ಪಕ್ಷಕ್ಕೆ ಹಣ ನೀಡಲಿ’ ಎಂದು ಅವರು ತಿಳಿಸಿದರು.

------------------------------------------------------------------

‘ಕೆಲವು ನಾಯಕರು ಕಾಂಗ್ರೆಸ್ ಸೇರಲು ಬಯಸಿದ್ದು, ಸಂಪರ್ಕದಲ್ಲಿದ್ದಾರೆ. ಅವರ ಹೆಸರನ್ನು ಈಗ ಬಹಿರಂಗ ಪಡಿಸುವುದಿಲ್ಲ. ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವ ಒಪ್ಪಿ ಬೇಷರತ್ತಾಗಿ ಸೇರಲು ಬಯಸುವವರು ಅರ್ಜಿ ಹಾಕಬಹುದು. ಅವರಿಗೆ ಮುಕ್ತ ಅವಕಾಶ ನೀಡಲಾಗಿದೆ. ಅರ್ಜಿ ಹಾಕಿದ ನಂತರ ಅಲ್ಲಂ ವೀರಭದ್ರಪ್ಪ ನೇತೃತ್ವದ ಸಮಿತಿ ಯಾರನ್ನು ಸೇರಿಸಿಕೊಳ್ಳಬೇಕೆಂದು ತೀರ್ಮಾನಿಸಲಿದೆ’

-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ

Similar News