ಈಜಿಪುರ ವಸತಿ ಸಮುಚ್ಚಯ ನಿರ್ಮಿಸಲು ವಿಳಂಬ: ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು, ನ.16: ಕೋರಮಂಗಲದ ಈಜಿಪುರ ವ್ಯಾಪ್ತಿಯಲ್ಲಿನ ವಸತಿ ಸಮುಚ್ಚಯ ನಿರ್ಮಿಸುವುದರಲ್ಲಿ ವಿಳಂಬ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್, ನೋಟಿಸ್ ಜಾರಿ ಮಾಡಿದೆ.
ಈಜಿಪುರ ನಿವಾಸಿಗಳ ಸಾಮಾಜಿಕ ಕಲ್ಯಾಣ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದ್ದು, ಪ್ರತಿಕ್ರಿಯಿಸುವಂತೆ ಆದೇಶಿಸಿದೆ.
ಕರ್ನಾಟಕ ಹೈಕೋರ್ಟ್ ಆದೇಶದಂತೆ ಈಜಿಪುರ ವಸತಿ ಸಮುಚ್ಚಯದ ಕಾಮಗಾರಿ ಆರಂಭಿಸಿದ್ದರೂ ಈವರೆಗೂ ಪೂರ್ಣಗೊಳಿಸಿಲ್ಲ. ಹೀಗಾಗಿ, ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ನಿರ್ದೇಶಿಸಬೇಕು. ಕಾಮಗಾರಿ ಪೂರ್ಣಗೊಳಿಸುವವರೆಗೆ ವಸತಿ ಹಕ್ಕುದಾರರಿಗೆ ಮಾಸಿಕ ಬಾಡಿಗೆ ಹಣ ನೀಡಲು ನಿರ್ದೇಶಿಸಬೇಕೆಂದು ಪೀಠಕ್ಕೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಸೂಚಿಸಿ, ವಿಚಾರಣೆಯನ್ನು ಡಿ.7ಕ್ಕೆ ಮುಂದೂಡಿತು.