ಚಿಂತಾಮಣಿ: ಮಾನಸಿಕ ರೋಗಿಗಳ ಪುನರ್ವಸತಿ ಕಟ್ಟಡಕ್ಕೆ ಸಚಿವ ಡಾ.ಕೆ.ಸುಧಾಕರ್ ಶಂಕು ಸ್ಥಾಪನೆ

ರಾಜ್ಯ ವಕ್ಫ್ ಮಂಡಳಿ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಟ್ಟಡ

Update: 2022-12-02 17:58 GMT

ಬೆಂಗಳೂರು, ಡಿ.2: ಆಧುನಿಕ ಜೀವನ ಶೈಲಿಯಿಂದಾಗಿ ಪ್ರತಿಯೊಬ್ಬರೂ ಒತ್ತಡದ ಜೀವನ ಸಾಗಿಸುವಂತಾಗಿದೆ. ಇದರಿಂದಾಗಿ, ಹದಿಹರೆಯದಲ್ಲೇ ಅನೇಕ ಆರೋಗ್ಯ ಸಂಬಂಧಿ ತೊಂದರೆಗಳಿಗೆ ಸಿಲುಕಿ ನರಳುತ್ತಾರೆ. ಆಪ್ತಸಮಾಲೋಚನೆ ಹಾಗೂ ಸೂಕ್ತ ಚಿಕಿತ್ಸೆಯಿಂದ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ರಾಜ್ಯ ವಕ್ಫ್ ಮಂಡಳಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ನಿರ್ಮಿಸಲಾಗುತ್ತಿರುವ ಮಾನಸಿಕ ರೋಗಿಗಳ ಪುನರ್ವಸತಿ ಕಟ್ಟಡಕ್ಕೆ ಶುಕ್ರವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಗಮಲ್ಲಾ ಗ್ರಾಮದಲ್ಲಿರುವ ಅಮ್ಮಾಜಾನ್, ಬಾವಾಜಾನ್ ದರ್ಗಾ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು.

ಚಿಂತಾಮಣಿ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ 'ಆರೋಗ್ಯ ಮತ್ತು ಕ್ಷೇಮ ಕೇಂದ್ರ' ಹಾಗೂ ಯಗವಕೋಟೆ ಗ್ರಾಮದಲ್ಲಿ 'ಪ್ರಾಥಮಿಕ ಆರೋಗ್ಯ ಕೇಂದ್ರದ ವಸತಿ ಗೃಹ'ಗಳ ಕಟ್ಟಡವನ್ನು ನಿರ್ಮಿಸಲಾಗುವುದು ಎಂದ ಅವರು, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಹದಿಹರೆಯದವರಿಗೆ ಆಪ್ತ ಸಮಾಲೋಚನೆ, ಯೋಗ ಶಿಬಿರಗಳು, ಅರ್ಹ ದಂಪತಿಗಳಿಗೆ ತಾತ್ಕಾಲಿಕ ಹಾಗೂ ಶಾಶ್ವತ ಗರ್ಭ ನಿರೋಧಕ ವಿಧಾನಗಳ ಸೇವೆ ಸೇರಿದಂತೆ ಎಲ್ಲ ಪ್ರಾಥಮಿಕ ಆರೋಗ್ಯ ಸೇವೆಗಳು ಲಭ್ಯವಿರಲಿದೆ ಎಂದರು.

ವಸತಿ ಗೃಹಗಳ ನಿರ್ಮಾಣದಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಿಬ್ಬಂದಿಗಳಿಗೆ ಅನುಕೂಲವಾಗಲಿದೆ ಎಂದು ಸುಧಾಕರ್ ಹೇಳಿದರು. ಕಾರ್ಯಕ್ರಮದಲ್ಲಿ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ, ಕೋಲಾರ ಸಂಸದ ಎಸ್.ಮುನಿಸ್ವಾಮಿ, ಶಾಸಕ ಜೆ.ಕೆ.ಕೃಷ್ಣಾ ರೆಡ್ಡಿ, ಜಿಲ್ಲಾಧಿಕಾರಿ ನಾಗರಾಜ್, ವಕ್ಫ್ ಬೋರ್ಡ್ ಸದಸ್ಯ ಆರ್.ಅಬ್ದುಲ್ ರಿಯಾಝ್ ಖಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Similar News