ರಾಹುಲ್ ವಿರುದ್ಧದ ಚುನಾವಣಾ ಜಯ ಮೊಕದ್ದಮೆ ವಜಾಗೊಳಿಸಿದ ಸುಪ್ರೀಂ ಕೋರ್ಟ್

Update: 2022-12-17 14:59 GMT

ಹೊಸದಿಲ್ಲಿ: 2019ರ ಲೋಕಸಭಾ ಚುನಾವಣೆಯಲ್ಲಿ, ಕೇರಳದ ವಯನಾಡ್ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಜಯ ಸಾಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೊಕದ್ದಮೆಯೊಂದನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಸರಿತಾ ಎಸ್. ನಾಯರ್ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠವೊಂದು ತಳ್ಳಿಹಾಕಿತು. 2019 ಅಕ್ಟೋಬರ್ 31ರಂದು ಕೇರಳ ಹೈಕೋರ್ಟ್ ನೀಡಿರುವ ನೀಡಿರುವ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ ಗೆ ಹೋಗಿದ್ದರು. ಹೈಕೋರ್ಟ್ ಕೂಡ ಸರಿತಾ ಎಸ್. ನಾಯರ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು.

ರಾಹುಲ್ ಗಾಂಧಿಯ ಆಯ್ಕೆಯನ್ನು ಪ್ರಶ್ನಿಸಿ ನಾಯರ್ ಸಲ್ಲಿಸಿದ್ದ ಅರ್ಜಿಯನ್ನು 2020 ನವೆಂಬರ್ 2 ರಂದು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಬಳಿಕ, ಅದೇ ಅರ್ಜಿಯನ್ನು ಮತ್ತೆ ವಿಚಾರಣೆಗೆ ಎತ್ತಿಕೊಳ್ಳಬೇಕೆಂದು ಕೋರಿ ಅವರು ಸುಪ್ರೀಂ ಕೋರ್ಟ್ ಗೆ ಇನ್ನೊಂದು ಅರ್ಜಿಯನ್ನು ಸಲ್ಲಿಸಿದ್ದರು.

ಆ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಕೈಗೆತ್ತಿಕೊಂಡ ನ್ಯಾಯಾಲಯವು, ಹಿಂದಿನ ಅರ್ಜಿಯ ಮರುವಿಚಾರಣೆಗೆ ಅಂಗೀಕಾರ ನೀಡಿತು. ‘ವಿಶೇಷ ಮೇಲ್ಮನವಿ ಅರ್ಜಿಯನ್ನು ಮತ್ತೊಮ್ಮೆ ವಿಚಾರಣೆಗೆ ಅಂಗೀಕರಿಸಲಾಗಿದೆ. ಅರ್ಜಿದಾರರ ವಕೀಲರ ವಾದವನ್ನು ಆಲಿಸಿದ ಬಳಿಕ, ಹಿಂದಿನ ಆದೇಶದಲ್ಲಿ ಯಾವುದೇ ಬದಲಾವಣೆ ಮಾಡಲು ಕಾರಣಗಳು ನಮಗೆ ಕಾಣುತ್ತಿಲ್ಲ. ಹಾಗಾಗಿ, ವಿಶೇಷ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಲಾಗಿದೆ’ ಎಂದು ನ್ಯಾಯಪೀಠವು ತನ್ನ ಅರ್ಜಿಯಲ್ಲಿ ಹೇಳಿದೆ.

ವಯನಾಡ್ ಮತ್ತು ಎರ್ನಾಕುಳಮ್ ಲೋಕಸಭಾ ಕ್ಷೇತ್ರಗಳಿಂದ ಸ್ಪರ್ಧಿಸಲು ಸರಿತಾ ನಾಯರ್ ಸಲ್ಲಿಸಿದ್ದ ನಾಮಪತ್ರಗಳನ್ನು 2019 ರಲ್ಲಿ ಚುನಾವಣಾ ಅಧಿಕಾರಿಗಳು ತಿರಸ್ಕರಿಸಿದ್ದರು. ಕೇರಳದಲ್ಲಿ ನಡೆದ ಸೋಲಾರ್ ಹಗರಣಕ್ಕೆ ಸಂಬಂಧಿಸಿದ ಎರಡು ಕ್ರಿಮಿನಲ್ ಪ್ರಕರಣಗಳಲ್ಲಿ ಅವರು ದೋಷಿಯಾಗಿದ್ದಾರೆ ಹಾಗೂ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಹಾಗಾಗಿ, ಅವರ ನಾಮಪತ್ರಗಳನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದರು.

Similar News