ಜನಾರ್ದನರೆಡ್ಡಿ ಆಸ್ತಿ ಜಪ್ತಿ ಅನುಮತಿಗೆ ವಿಳಂಬ: ರಾಜ್ಯ ಸರಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ

Update: 2023-01-10 12:00 GMT

ಬೆಂಗಳೂರು, ಜ.10: ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಮತ್ತವರ ಕುಟುಂಬಸ್ಥರಿಗೆ ಸೇರಿದ ಆಸ್ತಿಗಳ ಜಪ್ತಿಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ರಾಜ್ಯ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

ಜನಾರ್ದನರೆಡ್ಡಿಗೆ ಸೇರಿದ ಹೆಚ್ಚುವರಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. 

5 ತಿಂಗಳಾದರೂ ಸರಕಾರ ಏಕೆ ನಿರ್ಧಾರ ಕೈಗೊಂಡಿಲ್ಲ. ನಿಮ್ಮ ದೃಷ್ಟಿಯಲ್ಲಿ ನಿರ್ಧಾರ ಕೈಗೊಳ್ಳದಿರುವುದೂ ಇಂದು ಕ್ರಮ ಇರಬಹುದು. ಆದರೆ ಇದನ್ನು ಕೋರ್ಟ್ ಒಪ್ಪಲು ಸಾಧ್ಯವಿಲ್ಲ ಎಂದು ರಾಜ್ಯ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತು.

ಸರಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಸಿಬಿಐ ಮನವಿ ಪರಿಗಣಿಸಲು ಯಾವ ಕಾರಣಕ್ಕೆ ಆಸ್ತಿ ಜಪ್ತಿಗೆ ವಿಳಂಬವಾಗಿದೆ ಎಂಬುದರ ಕುರಿತು ಮಾಹಿತಿ ಪಡೆದುಕೊಳ್ಳಬೇಕಾಗಿದೆ. ಹೀಗಾಗಿ ಕಾಲಾವಕಾಶ ನೀಡಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸುಮಾರು 65 ಕೋಟಿ ರೂ. ಮೌಲ್ಯದ ಆಸ್ತಿಗಳ ಮುಟ್ಟುಗೋಲಿಗೆ ಈಗಾಗಲೇ ಅನುಮತಿ ನೀಡಿದ್ದೀರಿ. 19 ಕೋಟಿ ರೂ. ಗಳಿಗೆ ಅನುಮತಿ ನೀಡಲು ವಿಳಂಬ ಏಕೆ? ಎಂದು ಪ್ರಶ್ನಿಸಿತು. ಆರೋಪಿ ಪ್ರಭಾವಿ ಎಂದು ವಿಳಂಬ ಸರಿಯಲ್ಲ ಎಂದು ತಿಳಿಸಿತು. 

ಆಗ ಸರಕಾರಿ ವಕೀಲರು, ಯಾವ ಕಾರಣಕ್ಕೆ ವಿಳಂಬವಾಗಿದೆ ಎಂಬುದರ ಕುರಿತು ಮಾಹಿತಿ ಪಡೆದುಕೊಳ್ಳಬೇಕಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ಪ್ರತಿಕ್ರಿಯಿಸಲು ಕಾಲಾವಕಾಶ ನೀಡಿ, ವಿಚಾರಣೆಯನ್ನು ಜ.12ಕ್ಕೆ ಮುಂದೂಡಿತು.

ಪ್ರಕರಣವೇನು?: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತವರ ಕುಟುಂಬಸ್ಥರಿಗೆ ಸೇರಿದ ಹೆಚ್ಚುವರಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದಕ್ಕಾಗಿ 2022ರ ಆಗಸ್ಟ್‍ನಲ್ಲಿ ಸಲ್ಲಿಸಿರುವ ಮನವಿಯನ್ನು ಶೀಘ್ರದಲ್ಲಿ ಪರಿಗಣಿಸುವಂತೆ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಕೇಂದ್ರೀಯ ತನಿಖಾ ದಳ (ಸಿಬಿಐ) ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿತ್ತು.

ಸುಮಾರು 19.14 ಕೋಟಿ ಮೌಲ್ಯದ ಆಸ್ತಿಗಳನ್ನು ಅಕ್ರಮ ಎಂದು ಗುರುತಿಸಲಾಗಿದೆ. ಈ ಆಸ್ತಿಗಳನ್ನು ಮಾರಾಟ ಮಾಡುವುದಕ್ಕಾಗಿ ಜನಾರ್ದನ ರೆಡ್ಡಿ ಅವರು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ರಾಜ್ಯ ಸರಕಾರ ನಮ್ಮ ಮನವಿಯನ್ನು ಕಾರ್ಯಗತಗೊಳಿಸುವಲ್ಲಿ ವಿಫಲವಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

Similar News