ಉಡುಪಿ: ಸ್ಥಳೀಯಾಡಳಿತ ಸಂಸ್ಥೆಗಳ ಹೊರಗುತ್ತಿಗೆ ನೌಕರರ ಮುಷ್ಕರ ಅಂತ್ಯ
ಉಡುಪಿ: ಪೌರ ಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೊಳಪಡಿಸಿ ಹಂತಹಂತವಾಗಿ ಖಾಯಂಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹೊರಗುತ್ತಿಗೆ ನೌಕರರ ಸಂಘ ಉಡುಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಧರಣಿ ಇಂದು ಅಂತ್ಯಗೊಂಡಿದೆ.
ಎರಡನೇ ದಿನವಾದ ಇಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಧರಣಿ ನಡೆಸಿದ ಉಡುಪಿ ಜಿಲ್ಲೆಯ ಉಡುಪಿ ನಗರಸಭೆ, ಕುಂದಾಪುರ, ಕಾರ್ಕಳ, ಕಾಪು ಪುರಸಭೆ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್‌ಗಳಲ್ಲಿ ದುಡಿಯುತ್ತಿರುವ ಕಸ ಸಾಗಿಸುವ ವಾಹನ ಚಾಲಕರು, ನೀರು ಸರಬರಾಜು ಸಹಾಯಕರು, ಲೋಡರ್ಸ್, ಕ್ಲೀನರ್ಸ್, ಹೆಲ್ಪರ್ಸ್, ಒಳಚರಂಡಿ ಕಾರ್ಮಿಕರು ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ನೂರಾರು ಹೊರಗುತ್ತಿಗೆ ನೌಕರರು ಬೇಡಿಕೆ ಈಡೇರಿಸುವಂತೆ ಸರಕಾರವನ್ನು ಒತ್ತಾಯಿಸಿದರು.
‘ನಮ್ಮ ಹೋರಾಟಕ್ಕೆ ಮಣಿದು ಮಧ್ಯಾಹ್ನ ವೇಳೆ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸಂಘದ ಕರೆಯಂತೆ ಎರಡು ದಿನಗಳ ಈ ಮುಷ್ಕರವನ್ನು ವಾಪಾಸ್ಸು ಪಡೆದು ಕೊಳ್ಳಲಾಗಿದೆ ಎಂದು ಸಂಘದ ಉಡುಪಿ ಜಿಲ್ಲಾಧ್ಯಕ್ಷ ವಿನಯ ಕುಮಾರ್ ಮಾರ್ಪಳ್ಳಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸ ಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಪೂಜಾರಿ, ಕೋಶಾಧಿಕಾರಿ ಸುದೀಪ್, ಕುಂದಾಪುರದ ಪ್ರಭಾಕರ್, ಸಾಲಿಗ್ರಾಮದ ವಿಕ್ಟರ್, ಕಾರ್ಕಳದ ಕೆ.ರವಿ, ನಿರಂಜನ, ಪ್ರಸಾದ ಕೊರಗ, ಪ್ರಿಯತಮ, ಮಂಜುನಾಥ್, ಹಿರಿಯ ಚಾಲಕ ರವೀಂದ್ರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಬೆಂಬಲ: ಧರಣಿಯಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಸೇರಿದಂತೆ ಮುಖಂಡರು ಬುಧವಾರ ಪಾಲ್ಗೊಂಡು ಹೊರಗುತ್ತಿಗೆ ನೌಕರರ ಸಂಘದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಹಾಬಲ ಕುಂದರ್, ಉಡುಪಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶರತ್ ಶೆಟ್ಟಿ ಹಾಗೂ ಸಂಜಯ್ ಆಚಾರ್ಯ ಉಪಸ್ಥಿತರಿದ್ದರು.