ಫೆ.24: ಡಾ.ಎಂ.ಎನ್.ರಾಜೇಂದ್ರ ಕುಮಾರ್‌ರ 74ನೇ ಹುಟ್ಟು ಹಬ್ಬ-ಅಭಿವಂದನಾ ಕಾರ್ಯಕ್ರಮ
ಫಲಾನುಭವಿಗಳಿಗೆ ಸವಲತ್ತು ವಿತರಣೆ
ಮಂಗಳೂರು, ಫೆ.20: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲೂ ಗುರುತಿಸಿಕೊಂಡಿರುವ ‘ಸಹಕಾರ ರತ್ನ’, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್‌ರ 74ನೇ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಅವಿಭಜಿತ ದ.ಕ. ಜಿಲ್ಲೆಯ ಸಮಸ್ತ ಸಹಕಾರಿಗಳೆಲ್ಲರೂ ತೀರ್ಮಾನಿಸಿರುವುದಾಗಿ ಅಭಿವಂದನಾ ಸಮಿತಿಯ ಅಧ್ಯಕ್ಷ ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಫೆ.24ರಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್‌ರ 74ನೆ ಹುಟ್ಟುಹಬ್ಬ. ಅಂದು ಬೆಳಗ್ಗೆ 10:30ಕ್ಕೆ ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ರಾಜೇಂದ್ರ ಕುಮಾರ್‌ರ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಅಭಿವಂದನೆ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಸಮಾರಂಭ ನಡೆಯಲಿದೆ ಎಂದು ಹೇಳಿದ್ದಾರೆ.
*ಆದರ್ಶ ನಾಯಕ: ಸಹಕಾರ ಕ್ಷೇತ್ರವನ್ನು ಸದೃಢಗೊಳಿಸುವ ಚಿಂತನೆಯೊಂದಿಗೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿರುವ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಸಹಕಾರಿಗಳೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಸಹಕಾರ ಕ್ಷೇತ್ರದ ಬೆಳವಣಿಗೆಗೆ ವಿಶೇಷ ಕಾರ್ಯ ಯೋಜನೆ ಆಯೋಜಿಸಿ, ನಮಗೆಲ್ಲರಿಗೂ ಮಾರ್ಗದರ್ಶಕರಾದ ಡಾ.ರಾಜೇಂದ್ರ ಕುಮಾರ್‌ರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ 74 ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮವನ್ನು ಈ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ. ಸಹಕಾರ ಕ್ಷೇತ್ರವು ಸರ್ವಧರ್ಮೀಯರ ಕ್ಷೇತ್ರವಾಗಿರುವುದರಿಂದ ಸಮಾಜದ ಎಲ್ಲಾ ವರ್ಗದ ಫಲಾನುಭವಿಗಳನ್ನು ಗುರುತಿಸಿ ಸವಲತ್ತುಗಳನ್ನು ಈ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು ಎಂದು ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.
ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಶಾಸಕ ಡಿ.ವೇದವ್ಯಾಸ ಕಾಮತ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು ಡಾ.ರಾಜೇಂದ್ರ ಕುಮಾರ್‌ರನ್ನು ಅಭಿವಂದಿಸಲಿರುವರು, ದ.ಕ. ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಆಭಿವಂದನಾ ಭಾಷಣ ಮಾಡಲಿರುವರು.
74 ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆಯನ್ನು ದ.ಕ. ಜಿಲ್ಲಾಧಿಕಾರಿ ಎಂ.ಆರ್.ರವಿ ಕುಮಾರ್ ಹಾಗೂ ಹೊಸ ದಿಗಂತ ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಪಿ.ಎಫ್. ನೆರವೇರಿಸುವರು ಎಂದವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅಭಿನಂದನಾ ಸಮಿತಿಯ ಕಾರ್ಯಾಧ್ಯಕ್ಷ ಶಶಿಕುಮಾರ್ ರೈ ಬಾಲ್ಯೋಟ್ಟು , ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಎಸ್. ಕೋಟ್ಯಾನ್, ಬ್ಯಾಂಕ್ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ಬ್ಯಾಂಕ್ ನಿರ್ದೇಶಕರುಗಳಾದ ಬಿ.ನಿರಂಜನ್, ಟಿ.ಜಿ. ರಾಜಾರಾಮ ಭಟ್, ಎಂ.ವಾದಿರಾಜ ಶೆಟ್ಟಿ, ರಾಜು ಪೂಜಾರಿ, ಎಂ.ಮಹೇಶ್ ಹೆಗ್ಡೆ , ಎಸ್.ಬಿ. ಜಯರಾಮ್ ರೈ, ಮೋನಪ್ಪ ಶೆಟ್ಟಿ, ಹರಿಶ್ಚಂದ್ರ, ಕೆ.ಜೈರಾಜ್ ಬಿ, ರೈ, ರಾಜೇಶ್ ರಾವ್, ಸದಾಶಿವ ಉಳ್ಳಾಲ್, ಸಹಕಾರ ಸಂಘಗಳ ಉಪ ನಿಬಂಧಕರಾದ ರಮೇಶ್ ಎಚ್.ಎನ್.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ , ಮಹಾಪ್ರಬಂಧಕ ಅಶೋಕ್ ಕುಮಾರ್ ಹಾಗೂ ಬ್ಯಾಂಕ್ ಅಧಿಕಾರಿಗಳು ಉಪಸ್ಥಿತರಿದ್ದರು