ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿಗೆ ಜೈಲು ಶಿಕ್ಷೆ
ಮಂಗಳೂರು, ಫೆ.28: ಅಪ್ರಾಪ್ತ ವಯಸ್ಸಿನ ಬಾಲಕಿಯ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಮಂಗಳೂರಿನ ನ್ಯಾಯಾಲಯವು ಮೂರು ವರ್ಷ ಸಾದಾ ಶಿಕ್ಷೆ ವಿಧಿಸಿದೆ.
ಬಜ್ಪೆಯ ಅಬ್ದುಲ್ ಹಮೀದ್ ಯಾನೆ ಹಮೀದ್ (50) ಶಿಕ್ಷೆಗೊಳಗಾದ ಆರೋಪಿ.
2021ರ ಜೂ.3ರಂದು ಈತನು ನೆರೆಮನೆಯ ಬಾಲಕಿ ಒಬ್ಬಳೇ ಇದ್ದಾಗ ಆಕೆಯ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್ ರಾಘವೇಂದ್ರ ನಾಯ್ಕ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮತ್ತು ಎಫ್‌ಟಿಎಸ್‌ಸಿ-1(ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು ಫೆ.27ರಂದು ಆದೇಶ ನೀಡಿದ್ದಾರೆ.
ಆರೋಪಿ ಅಬ್ದುಲ್ ಹಮೀದ್‌ಗೆ ಪೊಕ್ಸೊ ಕಾಯ್ದೆಯ ಕಲಂ 8ರಡಿ 3 ವರ್ಷ ಸಾದಾ ಸಜೆ ಮತ್ತು 5,000 ರೂ. ದಂಡ, ಭಾರತೀಯ ದಂಡ ಸಂಹಿತೆಯ ಕಲಂ 448ರಡಿ 6 ತಿಂಗಳ ಸಾದಾ ಸಜೆ, ಕಲಂ 354ರಡಿ 1 ವರ್ಷ ಸಾದಾ ಸಜೆ ಮತ್ತು 1,000 ರೂ. ದಂಡ, ಕಲಂ 323ರಡಿ 6 ತಿಂಗಳ ಸಾದಾ ಸಜೆ ಮತ್ತು 1,000 ರೂ. ದಂಡ, ಕಲಂ 506ರಡಿ 1 ವರ್ಷ ಸಾದಾ ಸಜೆ ಹಾಗೂ 1,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೆ ಬಾಲಕಿಗೆ 1 ಲ.ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.
ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ವಾದಿಸಿದ್ದರು.