ಉಡುಪಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಇ-ಪತ್ರಿಕೆ ಬಿಡುಗಡೆ

Update: 2023-03-17 16:08 GMT

ಉಡುಪಿ : ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಸ್ವೀಪ್ ಚುನಾವಣಾ ಇ -ಪತ್ರಿಕೆಯನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಬಿಡುಗಡೆಗೊಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲಾ ಸ್ವೀಪ್ ಸಮಿತಿಯು ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಿಕೆ ಕುರಿತು ವಿವಿಧ ಕಾರ್ಯಕ್ರಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಚುನಾವಣಾ ಸಂಬಂದಿತ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಮಾಡುತ್ತಾ ಬಂದಿದ್ದು, ಇದರ ಒಂದು ಭಾಗವಾಗಿ ಇ-ಪತ್ರಿಕೆಯನ್ನು ಪ್ರಾರಂಭಿಸುವ ಮೂಲಕ ಜನರಿಗೆ ನೇರವಾಗಿ ಪ್ರಚಾರಪಡಿಸುವ ಕೆಲಸ ಮಾಡುತ್ತಿದೆ ಎಂದರು.

ಜಿಲ್ಲೆಯಲ್ಲಿ  ಪ್ರತಿಶತ 100ರಷ್ಟು  ಮತದಾನ ನಡೆಯಬೇಕೆಂಬ  ಗುರಿಯನ್ನು  ಸ್ವೀಪ್ ಸಮಿತಿ ಹೊಂದಿದೆ. ಮತದಾರರು ಯಾವುದೇ ರೀತಿಯ ಆಸೆ ಆಮಿಷಗಳಿಗೆ ಬಲಿಯಾಗದೇ, ಜಿಲ್ಲೆಯ ಪ್ರತಿಯೊಬ್ಬ ಮತದಾರರು  ಮತದಾನ ದಿನದಂದು  ಮತ ಚಲಾಯಿಸಲು ಮುಂದಾಗಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಪ್ರಸನ್ನ ಹೆಚ್ ಮಾತನಾಡಿ, ಚುನಾವಣಾ ಪ್ರಕ್ರಿಯೆ ಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು. ಈ ಸಂಬಂದ ಜನರಿಗೆ ಜಾಗೃತಿ ಮೂಡಿಸಲು ಕಳೆದ 2 ತಿಂಗಳಿನಿಂದ ಕಾರ್ಯಕ್ರಮಗಳು ಹಾಗೂ ಚಟುವಟಕೆ ಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಸ್ವೀಪ್ ಕುರಿತು, ಪ್ರತಿದಿನ ನಡೆಯುವ ಕಾರ್ಯಕ್ರಮಗಳ ಕುರಿತ ಸುದ್ದಿಗಳನ್ನು ಇ-ಪತ್ರಿಕೆಯ ಮೂಲಕ ಪ್ರಚಾರಪಡಿಸಲಾಗುವುದು. ಈಗಾಗಲೇ ೨ ಲಕ್ಷದವರೆಗೂ ಇ-ಪತ್ರಿಕೆಯು ಪ್ರಚಾರಗೊಳ್ಳುತ್ತಿದೆ ಎಂದರು.

ಈ ಸಂದರ್ಭದಲ್ಲಿ ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಅಪರ ಜಿಲ್ಲಾಧಿಕಾರಿ ವೀಣಾ, ತಾಲೂಕು ಚುನಾವಣಾ ಅಧಿಕಾರಿಗಳು ಉಪಸ್ಥಿತರಿದ್ದರು.

Similar News