ಭಟ್ಕಳ : ಕರ್ತವ್ಯದಲ್ಲಿದ್ದ ವೈದ್ಯಾಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ಯುವಕ
ಆರೋಪಿಯನ್ನು ಬಂಧಿಸಲು ಒತ್ತಾಯಿಸಿ ನೌಕರರ ಸಂಘದಿಂದ ಸಿಎಂಗೆ ಮನವಿ
ಭಟ್ಕಳ: ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಅಪರಿಚಿತ ಯುವಕನೋರ್ವ ಹಲ್ಲೆಗೆ ಯತ್ನಿಸಿ, ಜೀವ ಬೆದರಿಕೆ ಹಾಕಿರುವ ಪ್ರಕರಣ ನಡೆದಿದೆ.
ಇದರಿಂದಾಗಿ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಭಯದ ವಾತಾವರಣ ನಿರ್ಮಾಣವಾಗಿದ್ದು, ಆರೋಪಿ ಯನ್ನು ಶೀಘ್ರವಾಗಿ ಬಂಧಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಉಪವಿಭಾಗಾಧಿಕಾರಿ ಮೂಲಕ ಜಿಲ್ಲಾಧಿಕಾರಿ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ರವಿವಾರ ತಾಲೂಕು ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯಾಧಿಕಾರಿಗಳ ಮೇಲೆ ಹಾಗೂ ಸಿಬ್ಬಂದಿಗಳಿಗೆ ಯುವಕನೋರ್ವ ಬೆದರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ಈ ಕುರಿತು ಕರ್ತವ್ಯದಲ್ಲಿದ್ದ ಆಡಳಿತ ವೈದ್ಯಾಧಿಕಾರಿ ಅವರು ತುರ್ತು ಚಿಕಿತ್ಸಾ ವಿಭಾಗಕ್ಕೆ ಧಾವಿಸಿ ಬಂದು ಅಪರಿಚಿತನನ್ನು ಪ್ರಶ್ನಿಸಿದ್ದು, ಈ ವೇಳೆ ಯುವಕ ಹಲ್ಲೆ ಮಾಡಲು ಯತ್ನಿಸಿ ಜೀವ ಬೆದರಿಕೆ ಹಾಕಿದ್ದಾನೆ. ಈ ಘಟನೆಯು ಆಸ್ಪತ್ರೆಯಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿದ್ದು, ವೈದ್ಯಾಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಸಾರ್ವಜನಿಕರಿಗೆ ಹಾಗೂ ರೋಗಿಗಳಿಗೆ ತೊಂದರೆಯಾಗದಂತೆ ಸುಗಮವಾಗಿ ಕರ್ತವ್ಯ ನಿರ್ವಹಿಸಲು ಕಷ್ಟಕರವಾದ ವಾತಾವರಣ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಮೋಹನ ನಾಯ್ಕ, ಪ್ರಕಾಶ ಶಿರಾಲಿ, ಗಣೇಶ ಹೆಗಡೆ, ಸಂಶುದ್ದೀನ್ ಸೇರಿದಂತೆ ಉಳಿದ ಸರಕಾರಿ ಇಲಾಖೆಯ ನೌಕರರು ಹಾಗೂ ತಾಲೂಕಾಸ್ಪತ್ರೆಯ ನೌಕರರು ಸಿಬ್ಬಂದಿಗಳು ಮನವಿ ಸಲ್ಲಿಸುವ ವೇಳೆ ಉಪಸ್ಥಿತರಿದ್ದರು.