ಸಂಸದ ಬ್ರಿಜ್ ಭೂಷಣ್ ವಿರುದ್ಧದ ತನಿಖೆಯ ಸ್ಥಿತಿಗತಿ ವರದಿ ಸಲ್ಲಿಸುವಂತೆ ಸೂಚನೆ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳದ ಆರೋಪ

Update: 2023-05-10 15:19 GMT

ಹೊಸದಿಲ್ಲಿ, ಮೇ 10: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಡಬ್ಲ್ಯುಎಫ್ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕೈಗೊಳ್ಳಲಾಗಿರುವ ತನಿಖೆಯ ಸ್ಥಿತಿಗತಿ ವರದಿ ಸಲ್ಲಿಸುವಂತೆ ದಿಲ್ಲಿ ನ್ಯಾಯಾಲಯ ಬುಧವಾರ ದಿಲ್ಲಿ ಪೊಲೀಸರಿಗೆ ಸೂಚಿಸಿದೆ. 

ತನಿಖೆಯ  ಉಸ್ತುವಾರಿ ನಡೆಸುವಂತೆ ಹಾಗೂ ನ್ಯಾಯಾಲಯದ ಮುಂದೆ ಸಂತ್ರಸ್ತರ ಹೇಳಿಕೆಗಳನ್ನು ದಾಖಲಿಸಿಕೊಳ್ಳುವಂತೆ ಕೋರಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಸಲ್ಲಿಸಿದ ಮನವಿಯ ಹಿನ್ನೆಲೆಯಲ್ಲಿ ರೌಸ್ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಮುಖ್ಯಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಟ್  ಹರ್ಜೀತ್ ಸಿಂಗ್ ಜಸ್ಪಾಲ್ ಅವರು  ದಿಲ್ಲಿ ಪೊಲೀಸರಿಗೆ ನೋಟಿಸು ಜಾರಿ ಮಾಡಿದ್ದಾರೆ. 

ಈ ಪ್ರಕರಣದ ಮುಂದಿನ ವಿಚಾರಣೆ ನಡೆಯಲಿರುವ ಮೇ 12ರ ಒಳಗೆ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯ ಪೊಲೀಸರಿಗೆ  ಸೂಚಿಸಿತು. 

ಈ ಹಿಂದೆ ಕುಸ್ತಿ ಪಟುಗಳು ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ದಿಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಳ್ಳುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದರು. ತರುವಾಯ ಎಫ್ಐಆರ್ ದಾಖಲಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. 

ಪೊಲೀಸರು ನೀಡಿದ ಭರವಸೆಯನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್ ಪ್ರಕರಣವನ್ನು ಮುಕ್ತಾಯಗೊಳಿಸಿತ್ತು.  ಅರ್ಜಿದಾರರು ಯಾವುದೇ ಪರಿಹಾರ ಕೋರಿ ಸೂಕ್ತ ಅಧಿಕಾರ ವ್ಯಾಪ್ತಿ ಇರುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಇಲ್ಲವೇ ಹೈಕೋರ್ಟ್ ಸಂಪರ್ಕಿಸಬಹುದು ಎಂದು ಹೇಳಿತ್ತು.

Similar News