ರಾಜ್ಯ ಸರಕಾರದ ಗ್ಯಾರೆಂಟಿಗಳ ಬಗ್ಗೆ ಸಂಪುಟದ ತೀರ್ಮಾನಕ್ಕೆ ಕಾದು ನೋಡೋಣ: ಬಸವರಾಜ ಬೊಮ್ಮಾಯಿ
Update: 2023-05-31 13:32 GMT
ಹಾವೇರಿ: ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರೆಂಟಿಗಳ ಬಗ್ಗೆ ಸಂಪುಟದಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೊ ಕಾದು ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬುಧವಾರ ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಜಾರಿ ಮಾಡಲು ಮುಖ್ಯಮಂತ್ರಿ ಸಭೆಗಳನ್ನು ಮಾಡಲಿ, ನಾಳೆ ಸಚಿವ ಸಂಪುಟ ಸಭೆಯಲ್ಲಿ ಎಲ್ಲವೂ ಗೊತ್ತಾಗಲಿದೆ. ಯಾವುದು ಕೊಡುತ್ತಾರೆ, ಯಾವುದು ಇಲ್ಲ, ಏನು ಶರತ್ತುಗಳನ್ನು ಹಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಸಕ ಲಕ್ಷ್ಮಣ ಸವದಿ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ಅವರ ಪಕ್ಷದ ವಿಚಾರ ಎಂದರು.
ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸಮಿತಿ ಮಾಡುವುದಾಗಿ ಹೇಳಿದ್ದಾರೆ. ಏನು ಬದಲಾವಣೆ ಮಾಡುತ್ತಾರೆ ಎಂದು ಕಾದು ನೋಡೊಣ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.