ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪರನ್ನು ಭೇಟಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್
Update: 2023-06-01 13:15 GMT
ಬೆಂಗಳೂರು, ಜೂ. 1: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ಅವರು, ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಸಮಾಲೋಚನೆ ನಡೆಸಿ ಕುತೂಹಲ ಸೃಷ್ಟಿಸಿದ್ದಾರೆ.
ಗುರುವಾರ ಇಲ್ಲಿನ ಡಾಲರ್ಸ್ ಕಾಲನಿಯಲ್ಲಿರುವ ಯಡಿಯೂರಪ್ಪ ಅವರ ಧವಳಗಿರಿ ನಿವಾಸಕ್ಕೆ ಡಿ.ಕೆ. ಶಿವಕುಮಾರ್ ಭೇಟಿ ನೀಡಿದರು. ತಮ್ಮ ನಿವಾಸಕ್ಕೆ ಆಗಮಿಸಿದ ಶಿವಕುಮಾರ್ ಅವರನ್ನು ಗೇಟ್ ಬಳಿ ಬಂದು ಹೂಗುಚ್ಛ ನೀಡಿದ ಬಿ.ಎಸ್.ಯಡಿಯೂರಪ್ಪ ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಡಿ.ಕೆ.ಶಿವಕುಮಾರ್ ಅವರು ಬಿಎಸ್‍ವೈ ಅವರಿಗೆ ಹೂಗುಚ್ಛ ನೀಡಿ ಗೌರವ ಸಲ್ಲಿಸಿದರು.
ಆ ಬಳಿಕ ಬಿಎಸ್‍ವೈ ಅವರ ನಿವಾಸದ ಒಳಗೆ ತೆರಳಿದ ಉಭಯ ನಾಯಕರು ಕೆಲಕಾಲ ಸಮಾಲೋಚನೆ ನಡೆಸಿದ್ದು, ಇಂದೊಂದು ಸೌರ್ಜನ್ಯ ಭೇಟಿ ಎಂದು ಹೇಳಲಾಗಿದೆ.