‘ಮೀಸಲಾತಿ ಹೆಚ್ಚಳ’ ಸಂವಿಧಾನದ 9ನೆ ಶೆಡ್ಯೂಲ್‍ಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ: ಸಿದ್ದರಾಮಯ್ಯ
ದಲಿತ, ಹಿಂದುಳಿದ ವರ್ಗಗಳ ಮಠಾಧೀಶರ ಒಕ್ಕೂಟದಿಂದ ಸಿಎಂಗೆ ಸನ್ಮಾನ
ಬೆಂಗಳೂರು, ಜೂ.6: ರಾಜ್ಯದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್ ನಲ್ಲಿ ಸೇರ್ಪಡೆಗೊಳಿಸಲು ಕೇಂದ್ರ ಸರಕಾರವನ್ನು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಹಿಂದುಳಿದ ವರ್ಗ ಹಾಗೂ ದಲಿತ ಸಮುದಾಯಗಳ ಮಠಾಧೀಶರ ಒಕ್ಕೂಟದ ನಿಯೋಗದಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಹಿಂದಿನ ಬಿಜೆಪಿ ಸರಕಾರವು ತರಾತುರಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದು ಚುನಾವಣಾ ಗಿಮಿಕ್ ಆಗಿದೆ. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆ ಜಾರಿಗೊಳಿಸಿದರೂ ಅದನ್ನ ಸಂವಿಧಾನದ 9ನೆ ಶೆಡ್ಯೂಲ್‍ಗೆ ಸೇರ್ಪಡೆಗೊಳಿಸಲು ಚುನಾವಣೆ ಘೋಷಣೆಯ ಎರಡು ದಿನ ಮೊದಲಷ್ಟೇ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದೆ ಎಂದು ಅವರು ಹೇಳಿದರು.
ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ನೆಪದಲ್ಲಿ ಹಿಂದಿನ ಸರಕಾರ ಗೊಂದಲ ಸೃಷ್ಟಿಸಿದೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ ಕಲ್ಪಿಸುವಂತೆ ತಾವು ನೀಡಿದ್ದ ಸಲಹೆಯನ್ನು ನಿರ್ಲಕ್ಷಿಸಿದ ಪರಿಣಾಮ ವಿವಿಧ ಸಮುದಾಯಗಳ ವಿರೋಧ ಎದುರಿಸುವಂತಾಯಿತು ಎಂದು ಮುಖ್ಯಮಂತ್ರಿ ತಿಳಿಸಿದರು.
ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲದೆ ಹೋದರೆ ಇಂತಹ ಗೊಂದಲಗಳಾಗುತ್ತವೆ. ಜನಸಂಘ ಹಾಗೂ ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿ ನಿಲುವನ್ನೆ ಹೊಂದಿದ್ದವು. ಈಗ ಮೀಸಲಾತಿ ಹೆಚ್ಚಿಸಿರುವುದು ರಾಜಕೀಯ ಗಿಮಿಕ್. ಇದರ ಕುರಿತು ನಾವು ಎಚ್ಚರದಿಂದಿರಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.
ನಮ್ಮ ಸರಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ. ಕರ್ನಾಟಕದಲ್ಲಿ ಜನ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ನೀಡಿದ್ದಾರೆ. ಜನರು ಬದಲಾವಣೆ ಬಯಸಿದ್ದಾರೆ. ಹಿಂದಿನ ಸರಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಕಾಂಗ್ರೆಸ್ ಸರಕಾರ ಯಾವತ್ತೂ ಜಾತ್ಯತೀತ ಪಕ್ಷವಾಗಿದ್ದು, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ಸಾಮಾಜಿಕ ನ್ಯಾಯದ ನಿಲುವಿನಲ್ಲಿ ರಾಜಿ ಇಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಜಾತಿವಾರು ಸಮೀಕ್ಷೆ ವರದಿ ಸ್ವೀಕಾರ: ಈ ಹಿಂದೆ ನಮ್ಮ ಸರಕಾರ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು. ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರಕಾರಗಳು ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ ಎಂದು ಮುಖ್ಯಮಂತ್ರಿ ಹೇಳಿದರು.
ವಸ್ತು ಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ. ಈ ಹಿಂದೆ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಇದೀಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದಕ್ಕೆ ಸುಮಾರು 59 ಸಾವಿರ ಕೋಟಿ ರೂ.ವಾರ್ಷಿಕ ವೆಚ್ಚವಾಗಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.