ಜೂ.11ರ ಮಧ್ಯಾಹ್ನದಿಂದಲೇ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭ
ಬೆಂಗಳೂರು, ಜೂ.7: ರಾಜ್ಯ ಸರಕಾರದ ಪ್ರಮುಖ ಯೋಜನೆಗಳ ಪೈಕಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೂ.11ರಂದು ಚಾಲನೆ ನೀಡಲಿದ್ದು, ಅಂದು ಮಧ್ಯಾಹ್ನ 1 ಗಂಟೆಯಿಂದಲೇ ಮಹಿಳೆಯರು ಸರಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಬೆಳೆಸಬಹುದಾಗಿದೆ.
ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರಕಾರದ ಪ್ರಮುಖ ಯೋಜನೆಗಳ ಪೈಕಿ ಶಕ್ತಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆ ಉದ್ಘಾಟನೆ ಕಾರ್ಯಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿ ಚರ್ಚೆ ನಡೆಸಿದರು.
ಜೂನ್ 11 ರಂದು ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಅಂದು ಮಧ್ಯಾಹ್ನ 1 ಗಂಟೆಯ ಬಳಿಕ ಈ ಸೌಲಭ್ಯವನ್ನು ಮಹಿಳೆಯರು ಪಡೆಯಬಹುದಾಗಿದೆ ಎಂದು ಅಧಿಕಾರಿವೊಬ್ಬರು ಮಾಹಿತಿ ನೀಡಿದರು.
ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಯೋಜನೆಯ ಲಾಂಛನ ಹಾಗೂ ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಅನಾವರಣ ಗೊಳಿಸಲಿದ್ದಾರೆ.
ಸಭೆಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಸೇರಿದಂತೆ ಪ್ರಮುಖರಿದ್ದರು.