ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ಪ್ರಥಮ ಆದ್ಯತೆ: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
"ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ಪೊಲೀಸ್ ಇಲಾಖೆ ಪಕ್ಷಪಾತವಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು"
ಮಂಗಳೂರು, ಜೂ.11: ದ.ಕ. ಜಿಲ್ಲೆಯ ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ , ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಜಿಲ್ಲೆಗೆ ಮೊದಲ ಬಾರಿ ಭೇಟಿ ನೀಡಿದ ಅವರು ರವಿವಾರ ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಅಭಿವೃದ್ಧಿಗೆ ಪೂರಕವಾಗಿ ಕಾನೂನು ಸುವ್ಯವಸ್ಥೆ ಇರಬೇಕು. ಜಿಲ್ಲೆಯಲ್ಲಿ ಕೆಲವೊಮ್ಮೆ ಕಾನೂನು ಸುವ್ಯವಸ್ಥೆ ಹದಗೆಡುವುದನ್ನು ನಾನು ಗಮನಿಸಿದ್ದೇನೆ. ಮುಂದೆ ಯಾವತ್ತೂ ಇಂತಹ ಪರಿಸ್ಥಿತಿ ಬರಬರಬಾರದು. ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಯಾವುದೇ ಪಕ್ಷಪಾತವಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ಶಾಂತಿ , ಸಾಮರಸ್ಯಕ್ಕೆ ಪೂರಕವಾದ ವಾತಾವರಣ ನಿರ್ಮಾಣ ಮಾಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ನೀಡಬೇಕು. ಸಾಮರಸ್ಯವನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ.
ಸರಕಾರದ ಯೋಜನೆಗಳು ಸರಿಯಾದ ರೀತಿಯಲ್ಲಿ ಅನುಷ್ಠಾನವಾಗಬೇಕು. ನೈಜ ಫಲಾನುಭವಿಗಳಿಗೆ ಸೌಲಭ್ಯಗಳು ಮುಟ್ಟಬೇಕು. ನಾನು ಉಸ್ತುವಾರಿ ಸಚಿವನಾಗಿ ಮುಂದೆ ಆಗಾಗ ಈ ಜಿಲ್ಲೆಗೆ ಆಗಮಿಸಿ , ತಾಲೂಕುಗಳಿಗೆ ಭೇಟಿ ಕೊಟ್ಟು ಅಭಿವೃದ್ಧಿ ಕಾರ್ಯಗಳ , ಸರಕಾರಿ ಯೋಜನೆಗಳ ಬಗ್ಗೆ ಸರಿಯಾದ ಅನುಷ್ಠಾನದ ಬಗ್ಗೆ ಗಮನ ಹರಿಸುವುದಾಗಿ ಮತ್ತು ಸಾಮಾನ್ಯ ಜನರನ್ನು ಭೇಟಿಯಾಗಿ ಅವರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಶಾಸಕ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕರಾದ ಅಭಯಚಂದ್ರ ಜೈನ್, ಶಕುಂತಲಾ ಶೆಟ್ಟಿ, ಜೆ.ಆರ್.ಲೋಬೊ, ರಾಜ್ಯ ಸಭೆಯ ಮಾಜಿ ಸದಸ್ಯ ಬಿ.ಇಬ್ರಾಹೀಂ, ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ಜಿ.ಪಂ ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.