ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಸಿಎಂ ಡಿ.ಕೆ ಶಿವಕುಮಾರ್ಗೆ ತಾತ್ಕಾಲಿಕ ರಿಲೀಫ್
ಬೆಂಗಳೂರು, ಜೂ.12: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತಾತ್ಕಾಲಿಕ ರಿಲೀಫ್ ದೊರೆತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ್ದ ರಾಜ್ಯ ಸರಕಾರದ ಕ್ರಮವನ್ನು ಎತ್ತಿಹಿಡಿದಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಮಧ್ಯಂತರ ಪೀಠವು ತಡೆಯಾಜ್ಞೆ ನೀಡಿದೆ.
ತನ್ನ ವಿರುದ್ಧ ಸಿಬಿಐ ತನಿಖೆಗೆ ರಾಜ್ಯ ಸರಕಾರ ಅನುಮತಿ ನೀಡಿದ್ದನ್ನು ಪ್ರಶ್ನಿಸಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಹಿಂದೆ ಹೈತಕೋರ್ಟ್ ಮೆಟ್ಟಲೇರಿದ್ದರು. ಅವರ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಇದೀಗ ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ ಎಂದು ವರದಿಯಾಗಿದೆ.
ಈ ಹಿಂದೆ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸರಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು. ಆನಂತರ,ಡಿ.ಕೆ.ಶಿವಕುಮಾರ್ ಇದನ್ನು ಪ್ರಶ್ನಿಸಿತನ್ನ ವಿರುದ್ಧದ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್, ಅರ್ಜಿದಾರರ ಪರ ಹಾಗೂ ಸಿಬಿಐ ಪರ ವಕೀಲರ ವಾದ ಪ್ರತಿವಾದ ಆಲಿಸುತ್ತಾ ಹಲವು ಬಾರಿ ತಡೆಯಾಜ್ಞೆಯನ್ನು ವಿಸ್ತರಿಸಿತ್ತು. ಇನ್ನೂ, ಈಗ ವಿಚಾರಣೆಯಲ್ಲಿ ಅರ್ಜಿ ವಜಾಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.
ಏನಿದು ಪ್ರಕರಣ?: ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬದ ಸದಸ್ಯರು 74.93 ಕೋಟಿ ರೂ. ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎಂಬ ಆರೋಪ ಸಂಬಂಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು. ಅದರಂತೆ 2020ರಂದು ಶಿವಕುಮಾರ್ ಅವರಿಗೆ ಸೇರಿದ 14 ಸ್ಥಳಗಳ ಮೇಲೆ ಸಿಬಿಐ ಏಕಕಾಲಕ್ಕೆ ದಾಳಿ ನಡೆಸಿತ್ತು.