ರಾಜ್ಯಕ್ಕೆ ಅಕ್ಕಿ ನೀಡದೇ ಇರುವುದರ ಹಿಂದೆ ದೊಡ್ಡ ಷಡ್ಯಂತ್ರ: ಡಿಸಿಎಂ ಡಿಕೆಶಿ

"ಸಿಎಂ ಜತೆ ಚರ್ಚಿಸಿ ಈ ಬಗ್ಗೆ ಎಲ್ಲವನ್ನು ಬಹಿರಂಗಪಡಿಸುವೆ"

Update: 2023-06-19 10:39 GMT

ಬೆಂಗಳೂರು, ಜೂ.19: ರಾಜ್ಯಕ್ಕೆ ಅಕ್ಕಿ ನೀಡದೇ ಇರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಇದರ ಬಗ್ಗೆ ಮುಖ್ಯಮಂತ್ರಿಯ ಜತೆ ಚರ್ಚೆ ಮಾಡಿ ಎಲ್ಲವನ್ನು ಬಹಿರಂಗಪಡಿಸುತ್ತೇನೆ. ಕೇಂದ್ರ ಸರ್ಕಾರ ಊಹೆಗೂ ಮೀರಿ ರಾಜ್ಯದ ವಿರುದ್ಧ ಧೋರಣೆ ತಾಳುತ್ತಿದೆ. ಈ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ನಿಮ್ಮ ಮುಂದೆ ಬಹಿರಂಗಪಡಿಸುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ತೊಂದರೆ ಕೊಡಲು, ಬಡವರಿಗೆ ಅಕ್ಕಿ ನೀಡದಿರಲು ಕೇಂದ್ರ ಸರಕಾರವು ತೀರ್ಮಾನಿಸಿದೆ. ಪುಕ್ಕಟೆಯಾಗಿ ಅಕ್ಕಿ ನೀಡಿ ಎಂದು ನಾವು ಅವರಿಗೆ ಕೇಳಿರಲಿಲ್ಲ. ಭಾರತೀಯ ಆಹಾರ ಪ್ರಾಧಿಕಾರ ದೇಶದಲ್ಲಿ ರೈತರಿಂದ ಧವಸ ಧಾನ್ಯಗಳನ್ನು ಖರೀದಿ ಮಾಡಿ ದಾಸ್ತಾನು ಮಾಡುವ ವ್ಯವಸ್ಥೆ ಇದೆ. ಸದ್ಯ ದಾಸ್ತಾನಿನಲ್ಲಿ ಅಕ್ಕಿ ಇದ್ದು, ಆರಂಭದಲ್ಲಿ ನೀಡಲು ಒಪ್ಪಿದವರು, ನಂತರ ಅದನ್ನು ನಿರಾಕರಿಸಿದ್ದಾರೆ. ಹೀಗಾಗಿ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪಕ್ಷದಿಂದ ಜೂ.20ರಂದು ಪ್ರತಿಭಟನೆ ಮಾಡಲಾಗುತ್ತಿದೆ. ಪಕ್ಷದ ಎಲ್ಲಾ ನಾಯಕರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದು, ನಾನು ಸಹ ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದವರು ತಿಳಿಸಿದರು.

ಆರ್.ಅಶೋಕ್ ತಮ್ಮ ತಟ್ಟೆಯಲ್ಲಿರುವ ಹೆಗ್ಗಣ ತೆಗೆಯಲಿ

ಅಶೋಕ್ ಅವರ ಹೇಳಿಕೆ ಕುರಿತು ಕೇಳಿದಾಗ, ‘ಅಶೋಕ್ ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ತೆಗೆದು ಹಾಕಲಿ. ಅವರ ಪಕ್ಷದಲ್ಲಿನ ನಾಯಕರ ಹೇಳಿಕೆ ಕುರಿತು ಗೊಂದಲ ಬಗೆಹರಿಸಿಕೊಳ್ಳಲಿ. ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲಿ. ನಂತರ ನಮ್ಮ ಪಕ್ಷ, ಮುಖ್ಯಮಂತ್ರಿ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಲಿ.'

'ಜನ ನಮಗೆ 5 ವರ್ಷಗಳ ಕಾಲ ಅಧಿಕಾರ ನೀಡಿದ್ದು, ಅವರ ನಂಬಿಕೆ ಉಳಿಸಿಕೊಳ್ಳುವುದು ನಮ್ಮ ಗುರಿ’ ಎಂದು ತಿಳಿಸಿದರು.

ಸುರೇಶ್ ಹೇಳಿಕೆ ವೈರಾಗ್ಯದ್ದಲ್ಲ

ಡಿ.ಕೆ.ಸುರೇಶ್ ರಾಜಕೀಯ ವೈರಾಗ್ಯದ ಕುರಿತು ಮಾತನಾಡಿರುವ ಬಗ್ಗೆ ಕೇಳಿದಾಗ, ‘ಡಿ.ಕೆ. ಸುರೇಶ್ ಬಹಳ ಪ್ರಜ್ಞಾವಂತ ಹಾಗೂ ಅನುಭವವಿರುವ ನಾಯಕರು. ಅವರಿಗೆ ಹೊಸ ನಾಯಕತ್ವ ಬೆಳೆಸಬೇಕು ಎಂಬ ಆಲೋಚನೆಗಳಿರುತ್ತವೆ. ಅವರಿಗೆ ಯಾವುದೇ ರೀತಿಯ ವೈರಾಗ್ಯವಿಲ್ಲ. ನಿಮ್ಮಷ್ಟಕ್ಕೆ ನೀವೇ ಕಲ್ಪನೆಗಳನ್ನು ಮಾಡಿಕೊಂಡರೆ ಅದು ನಿಮಗೆ ಬಿಟ್ಟ ವಿಚಾರ’ಎಂದು ತಿಳಿಸಿದರು.

ಸಚಿವ ಸಂಪುಟ ಸಚಿವರ ದಿಲ್ಲಿ ಪ್ರವಾಸ ಕುರಿತು ಕೇಳಿದಾಗ, ‘ಪಕ್ಷದ ಪ್ರಣಾಳಿಕೆ ಜಾರಿ, ನಾವು ಕೊಟ್ಟ ಮಾತು ಉಳಿಸಿಕೊಳ್ಳಬೇಕು, ಎಚ್ಚರಿಕೆಯಿಂದ ಜನರ ಸೇವೆ, ಸಂಸತ್ ಚುನಾವಣೆಯಲ್ಲಿ ಕಾರ್ಯಕರ್ತರ ಸಂಘಟನೆ ಮಾಡಲು ಜಿಲ್ಲಾ ಉಸ್ತುವಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಮತ್ತೆ ಕೆಲವರಿಗೆ ಜಾಬ್ದಾರಿ ನೀಡಬೇಕಿದೆ. ಉತ್ತಮ ಆಡಳಿತ ನೀಡುವುದು ಸೇರಿದಂತೆ ಅನೇಕ ವಿಚಾರವಾಗಿ ಚರ್ಚೆ ಮಾಡಲಾಗುವುದು. ನಮ್ಮ ನಾಯಕರುಗಳು ನಮ್ಮ ಅಧ್ಯಕ್ಷರು ಹಾಗೂ ಹೈಕಮಾಂಡ್ ಭೇಟಿಗೆ ಕಾಲವಕಾಶ ಕೇಳುತ್ತಿದ್ದರು. ಹೀಗಾಗಿ ಎಲ್ಲರನ್ನು ಒಟ್ಟಿಗೆ ಕರೆಸಲು ನಮ್ಮ ನಾಯಕರು ತೀರ್ಮಾನಿಸಿದ್ದಾರೆ. ಅವರು ಒಂದು ದಿನಾಂಕ ನೀಡಿದ್ದು, ಇನ್ನು ಅಂತಿಮವಾಗಿಲ್ಲ. ಇಂದು ಅಂತಿಮ ದಿನಾಂಕದ ಬಗ್ಗೆ ಮಾಹಿತಿ ನೀಡಲಿದ್ದಾರೆ’ ಎಂದು ತಿಳಿಸಿದರು. 

ಪರಿಷತ್ ಸ್ಥಾನಗಳ ಆಯ್ಕೆ ವಿಚಾರವಾಗಿ ಕೇಳಿದಾಗ, ‘ನಾಮಪತ್ರ ಸಲ್ಲಿಸಲು ನಾಳೆಯವರೆಗೂ ಕಾಲಾವಕಾಶವಿದೆ. ನಮ್ಮ ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತದೆಯೋ ಅದರಂತೆ ಅವಕಾಶ ನೀಡಲಾಗುವುದು. ನಾಮಪತ್ರ ಸಲ್ಲಿಕೆ ಮಾಡುವಾಗ ಯಾರು ನಾಮಪತ್ರ ಸಲ್ಲಿಸಲಿದ್ದಾರೆ ಎಂಬುದು ತಿಳಿಯಲಿದೆ’ ಎಂದು ತಿಳಿಸಿದರು.

Similar News