ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಒತ್ತಾಯ; ಸಚಿವ ಮಧು ಬಂಗಾರಪ್ಪಗೆ ಪತ್ರ ಬರೆದ ನಿರಂಜನಾರಾಧ್ಯ ವಿ.ಪಿ
ಬೆಂಗಳೂರು, ಜೂ.21: ರಾಜ್ಯದಲ್ಲಿರುವ ಸರಕಾರಿ ಶಾಲೆಗಳ ಸಬಲೀಕರಣದ ಕುರಿತು ತಕ್ಷಣದ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಒತ್ತಾಯಿಸಿದೆ.
ಬುಧವಾರ ಈ ಸಂಬಂಧ ಪತ್ರವನ್ನು ವೇದಿಕೆ ಮಹಾಪೋಷಕ ಡಾ.ನಿರಂಜನಾರಾಧ್ಯ ವಿ.ಪಿ., ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರವನ್ನು ಬರೆದಿದ್ದು, ಹಲವು ಶಾಲೆಗಳಲ್ಲಿ ಕಟ್ಟಡ ಕುಸಿದು ಮಕ್ಕಳು ಮೃತರಾದ ಬಗ್ಗೆ ವರದಿಯಾಗುತ್ತಿದ್ದು, ಮತ್ತಷ್ಟು ಅವಘಡಗಳು ಸಂಭವಿಸದಂತೆ ರಾಜ್ಯದಲ್ಲಿನ ಎಲ್ಲ ಸರಕಾರಿ ಶಾಲೆಗಳ ಸ್ಥಿತಿಗತಿ ಅರಿಯಲು ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ನಿರ್ದೇಶಿಸಬೇಕು ಎಂದು ತಿಳಿಸಿದ್ದಾರೆ.
ಸರಕಾರಿ ಶಾಲೆಯಲ್ಲಿ ಮಕ್ಕಳಿದ್ದರೂ, ಶೂನ್ಯ ಶಿಕ್ಷಕರಿರುವ ಶಾಲೆಗಳಿಗೆ ಕೂಡಲೇ ಖಾಯಂ ಶಿಕ್ಷಕರ ನೇಮಕವಾಗಬೇಕು. ಮೂರ್ನಾಲ್ಕು ವರ್ಷಗಳಿಂದ ಶಾಲಾ ಅನುದಾನಗಳು ಪೂರ್ಣ ಪ್ರಮಾಣದಲ್ಲಿ ಬಾರದಿರುವುದರಿಂದ, ತಕ್ಷಣವೇ ಶಾಲಾ ಅನುದಾನವನ್ನು ಬಿಡುಗಡೆ ಮಾಡಲು ಕ್ರಮ ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪ್ರೌಢ ಶಿಕ್ಷಣ ಮುಂದುವರಿಸಲು ಅನುಕೂಲವಾಗುವಂತೆ ಹೆಣ್ಣು ಹಾಗು ಗಂಡು ಮಕ್ಕಳಿಗೆ ಸಿಗುತ್ತಿದ್ದ ಬೈಸಿಕಲ್ ವಿತರಣೆಯನ್ನು ನಾಲ್ಕು ವರ್ಷಗಳಿಂದ ಸ್ಥಗಿತವಾಗಿದ್ದು, ಸಾವಿರಾರು ಮಕ್ಕಳು ಶಾಲೆ ಬಿಟ್ಟಿದ್ದಾರೆ. ಆದುದರಿಂದ ಕೂಡಲೇ ಮಕ್ಕಳಿಗೆ ಬೈಸಿಕಲ್ ವಿತರಿಸುವ ಪ್ರಕ್ರಿಯೆ ಪ್ರಾರಂಭಿಸಬೇಕು ಎಂದು ಅವರು ತಿಳಿಸಿದ್ದಾರೆ.
ಬಾಲ್ಯಪೂರ್ವ ಆರೈಕೆ ಮತ್ತು ಶಿಕ್ಷಣವೂ ಒಳಗೊಂಡಂತೆ ಕನಿಷ್ಠ 12ನೆಯ ತರಗತಿಯವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ವಿಸ್ತರಿಸಲು ಸಂವಿಧಾನ ಹಾಗು ಶಿಕ್ಷಣಹಕ್ಕು ಕಾಯಿದೆಗೆ ಅಗತ್ಯ ತಿದ್ದುಪಡಿ ತರಲು ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಬೇಕು. ಅಂಗನವಾಡಿಯಿಂದ 10ನೆ ತರಗತಿಯ ಎಲ್ಲ ಮಕ್ಕಳಿಗೆ ಪ್ರತಿದಿನ ಮೊಟ್ಟೆ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಆಯವ್ಯಯದಲ್ಲಿ ಶಿಕ್ಷಣಕ್ಕೆ ಶೇ.20ರಷ್ಟು ಮೀಸಲಿಡಬೇಕು. ಸರಕಾರಿ ಶಾಲೆಗಳಲ್ಲಿ ಬಳಸುವ ವಿದ್ಯುಚ್ಛಕ್ತಿ ಹಾಗು ನೀರಿನ ಬಳಕೆಯ ಬಿಲ್‍ಗಳ ಹಣವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮನ್ನಾ ಮಾಡಬೇಕು. ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರು, ಮಕ್ಕಳ ಶೌಚಾಲಯ, ತರಗತಿ ಕೋಣೆ ಸೇರಿದಂತೆ ಮೂಲಭೂತ ಸೌಕರ್ಯಗಳು ಪ್ರಥಮ ಆದ್ಯತೆಯಾಗಬೇಕು ಎಂದು ತಿಳಿಸಿದ್ದಾರೆ.