ಯತ್ನಾಳ್’ರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ

Update: 2023-06-21 18:32 GMT

ಬೆಂಗಳೂರು, ಜೂ.21: ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ನಕಲಿ ಮತದಾರರಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಗೆಲುವು ಸಾಧಿಸಿದ್ದಾರೆಂದು ಆರೋಪಿಸಿರುವ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರಿಫ್ ಅವರು, ಯತ್ನಾಳ್‍ರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.   

ಈ ಸಂಬಂಧ ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಿಜಯಪುರ ಕ್ಷೇತ್ರದ ಪಕ್ಷದ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರಿಫ್ ಅವರು, ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತದಾರರ ಪಟ್ಟಿಯನ್ನು ತಿರುಚುವ ಹಾಗೂ ನಕಲಿ ಮತದಾರರ ಮೂಲಕ ಗೆದ್ದಿದ್ದಾರೆ ಎಂದು ಆರೋಪಿಸಿದರು.

ಕಲಬುರಗಿಯ ಚಿಂಚೋಳಿ ತಾಲೂಕಿನಿಂದ ಯತ್ನಾಳ್ ಪರ ಮತ ಹಾಕಲು ಬಂದ ನಕಲಿ ಮತದಾರರನ್ನು ಕಾಂಗ್ರೆಸ್ ಕಾರ್ಯಕರ್ತರು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದರೂ ಪೊಲೀಸರು ಅವರ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು.

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಎಲ್ಲ ಮತಗಟ್ಟೆಗಳಲ್ಲಿ ಮನೆಮನೆಗೆ ತೆರಳಿ ಸಮೀಕ್ಷೆ ನಡೆಸಬೇಕು. ಇಂಥ ಅಕ್ರಮಗಳನ್ನು ಎಸಗಿ ಮತದಾರರ ಹಕ್ಕು ಕಸಿದುಕೊಂಡಿರುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಮತದಾರರಿಗೆ ಹಾಗೂ ನಮಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಮುಶ್ರೀಫ್ ಹೇಳಿದರು.

ಅಲ್ಲದೇ, ಈ ಕುರಿತು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ, ರಾಜ್ಯಪಾಲ, ಕೇಂದ್ರ ಮುಖ್ಯ ಚುನಾವಣಾಧಿಕಾರಿ, ರಾಜ್ಯ ಮುಖ್ಯ ಚುನಾವಣಾಧಿಕಾರಿ, ಮುಖ್ಯಮಂತ್ರಿ, ಜಿಲ್ಲಾ ಚುನಾವಣಾಧಿಕಾರಿಗಳಿಗೆ ಈಗಾಗಲೇ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ವಕೀಲ ರಹಮತ್ ಉಲ್ಲಾ ಕೊತ್ವಾಲ್ ಸೇರಿ ಉಪಸ್ಥಿತರಿದ್ದರು. 

Similar News