ಈ ರೀತಿಯ ವರದಿ ಸಲ್ಲಿಸಿರುವ ಅಧಿಕಾರಿಯ ಮನೆಯಲ್ಲಿಯೂ ಇದೇ ಪರಿಸ್ಥಿತಿ ಇದೆಯೇ?: ಹೈಕೋರ್ಟ್ ಅಸಮಾಧಾನ
ಸರಕಾರಿ ಶಾಲೆಗಳಲ್ಲಿ ಮೂಲ ಸೌಲಭ್ಯದ ಕೊರತೆ
ಬೆಂಗಳೂರು, ಜೂ. 22: ರಾಜ್ಯದಲ್ಲಿ ಸರಕಾರಿ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯ್ದೆಯ(ಆರ್‍ಟಿಇ) ಮಾನದಂಡಗಳಿಗೆ ಅನುಗುಣವಾಗಿ ಶೌಚಾಲಯ ಸೇರಿದಂತೆ ಮೂಲಸೌಲಭ್ಯಗಳನ್ನು ಕಲ್ಪಿಸದ ಸರಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವುದಕ್ಕೆ ಸಂಬಂಧಿಸಿದಂತೆ 2013ರಲ್ಲಿ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಎಂಜೆಎಸ್ ಕಮಲ್ ನೇತೃತ್ವದ ವಿಭಾಗೀಯ ನ್ಯಾಯಪೀಠ, ಶಾಲೆಗಳ ದುಸ್ಥಿತಿ ಗಮನಿಸಿದರೆ ನಮ್ಮ ಆತ್ಮಸಾಕ್ಷಿಗೆ ಆಘಾತವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತು.
ಸರಕಾರ ಸಲ್ಲಿಸಿರುವ ವರದಿ ಮತ್ತು ಛಾಯಾಚಿತ್ರಗಳನ್ನು ಪರಿಶೀಲಿಸಿದ ನ್ಯಾಯಪೀಠ, ಶಾಲೆಗಳಲ್ಲಿ ಶೌಚಾಲಯಗಳ ಸ್ಥಿತಿ ಅತ್ಯಂತ ಕರುಣಾಜನಕವಾಗಿದೆ. ಶಾಲೆಯ ಶೌಚಾಲಯದ ಸುತ್ತಮುತ್ತಲ ಪ್ರದೇಶದಲ್ಲಿ ಗಿಡಗಂಟಿಗಳು ಬೆಳೆದಿವೆ. ಈ ರೀತಿಯ ವರದಿ ಸಲ್ಲಿಸಿರುವ ಅಧಿಕಾರಿಯ ಮನೆಯಲ್ಲಿಯೂ ಇದೇ ಪರಿಸ್ಥಿತಿ ಇದೆಯೇ ಎಂದು ನ್ಯಾಯಪೀಠ ಪ್ರಶ್ನಿಸಿತು. ಕೆಲವು ಶಾಲೆಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಗಳಿಗೆ ನೀರಿನ ಸೌಲಭ್ಯ ಇಲ್ಲ ಎಂದು ಪೀಠ ಹೇಳಿತು.
2013ರಲ್ಲಿ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲಾಗಿದೆ. ಈವರೆಗೂ ಯಾವುದೇ ಬದಲಾವಣೆ ಕಾಣಲಾಗಿಲ್ಲ. ಅಧಿಕಾರಿಗಳು ಸ್ವಲ್ಪವಾದರೂ ಕಾಳಜಿ ತೋರಿಸಬೇಕು. ಸರಕಾರಿ ಶಾಲೆಗಳಲ್ಲಿನ ಸ್ಥಿತಿ ನೋಡಿ ನಮಗೆ ಸಾಕಷ್ಟು ನೋವಾಗಿದೆ ಎಂದು ಪೀಠ ತಿಳಿಸಿತು.
ಸರಕಾರಿ ಶಾಲೆಗಳಲ್ಲಿನ ಮೂಲ ಸೌಲಭ್ಯಗಳ ಪರಿಸ್ಥಿಗಳ ಕುರಿತು ಮುಂದಿನ ಮೂರು ತಿಂಗಳಲ್ಲಿ ಮರು ಸಮೀಕ್ಷೆ ನಡೆಸಬೇಕು. ಈ ಸಮೀಕ್ಷೆಯ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳ ಸದಸ್ಯ ಕಾರ್ಯದರ್ಶಿಗಳನ್ನು ಭಾಗಿಯಾಗುವಂತೆ ನೋಡಿಕೊಳ್ಳಬೇಕು ಎಂದು ಪೀಠ ತಿಳಿಸಿದೆ.
ಅಲ್ಲದೇ, ಮುಂದಿನ ವಿಚಾರಣೆಯ ಸಂದರ್ಭದಲ್ಲಿ ಸರಕಾರ ಸಲ್ಲಿಸುವ ವರದಿಗೆ ಕಾನೂನು ಸೇವಾ ಪ್ರಾಧಿಕಾರದ ಅಧಿಕಾರಿಗಳ ಸಹಿ ಕಡ್ಡಾಯವಾಗಿರಬೇಕು ಎಂದು ನಿರ್ದೇಶನ ನೀಡಿದೆ.
ಹೈಕೋರ್ಟ್ ನೀಡಿರುವ ಈ ಆದೇಶದ ಪ್ರತಿ ಸರಕಾರದ ಮುಖ್ಯ ಕಾರ್ಯದರ್ಶಿಗಳು ಮತ್ತು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ಗಮನಕ್ಕೆ ತರಬೇಕು ಎಂದು ಪೀಠ ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ಮಕ್ಕಳ ಶಿಕ್ಷಣಕ್ಕಾಗಿ ಬಜೆಟ್‍ನಲ್ಲಿ ಪ್ರತೇಕ ಅನುದಾನ ಮೀಸಲಿಡಬೇಕು. ಆ ಮೊತ್ತವನ್ನು ನಿರ್ದಿಷ್ಟ ಕಾಲ ಮಿತಿಯಲ್ಲಿ ವಿನಿಯೋಗಿಸಬೇಕು ಎಂದು ನಿರ್ದೇಶನ ನೀಡಿತು.