ತಾಲೂಕು ಮಟ್ಟದಲ್ಲಿಯೇ ನರ್ಸಿಂಗ್ ಕೋರ್ಸ್: ಸಚಿವ ದಿನೇಶ್ ಗುಂಡೂರಾವ್

Update: 2023-06-22 16:27 GMT

ಬೆಂಗಳೂರು, ಜೂ. 22: ‘ರಾಜ್ಯ ವ್ಯಾಪಿ ತಾಲೂಕು ಮಟ್ಟದ ಪ್ರಮುಖ ಆಸ್ಪತ್ರೆಗಳಲ್ಲಿ ನಸಿರ್ಂಗ್ ಕೋರ್ಸ್ ಪ್ರಾರಂಭಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ.ಎಂ.ವಿಜಯ್ ಭಾಸ್ಕರ್ ನೇತೃತ್ವದ ನಿಯೋಗವೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕೈಗೊಳ್ಳಬಹುದಾದ ಆಡಳಿತ ಸುಧಾರಣೆಗಳ ಕುರಿತ ವರದಿ ಸ್ವೀಕರಿಸಿ ಅವರು ಮಾತನಾಡಿದರು.

ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಸೇವೆಗಳಲ್ಲಿ ಪರಿಣಾಮಕಾರಿಯಾಗಿ ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಆಡಳಿತ ಸುಧಾರಣಾ ಆಯೋಗ-2 ಹಲವು ಶಿಫಾರಸ್ಸುಗಳನ್ನು ಮಾಡಿದ್ದು, ಎರಡು ಮೂರು ಹಂತಗಳಲ್ಲಿ ವರದಿ ಅನುಷ್ಠಾನಗೊಳಿಸುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಡ್ಡಾಯ ಗ್ರಾಮೀಣ ಸೇವೆಯಲ್ಲಿರುವ ಎಂಬಿಬಿಎಸ್ ವೈದ್ಯರನ್ನು ನಗರ ಪ್ರದೇಶಗಳಿಗೂ ಬಳಸಿಕೊಳ್ಳಲು ಈ ಬಾರಿಯ ಅಧಿವೇಶನದಲ್ಲಿ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ. ಸರಕಾರಿ ಆಸ್ಪತ್ರೆಗಳಲ್ಲಿ ನಸಿರ್ಂಗ್ ಕೋರ್ಸ್‍ಗಳನ್ನು ಈಗಾಗಲೇ ಕೆಸಿ ಜನರಲ್ ಆಸ್ಪತ್ರೆಗಳಲ್ಲಿ ಪ್ರಾರಂಭಿಸಲಾಗಿದೆ. ತಾಲೂಕು ಮಟ್ಟದ ಪ್ರಮುಖ ಆಸ್ಪತ್ರೆಗಳಲ್ಲಿ ನಸಿರ್ಂಗ್ ಕೋರ್ಸ್ ಪ್ರಾರಂಭಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಸಚಿವರು ಹೇಳಿದರು.

Similar News