ಕಾಲೇಜುಗಳಲ್ಲಿ ಖಾಲಿಯಿರುವ 1,033 ಹುದ್ದೆ ಭರ್ತಿಗೆ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಕಾಲೇಜುಗಳಲ್ಲಿ ಒಟ್ಟು 1033 ಹುದ್ದೆಗಳು ಖಾಲಿಯಿವೆ. ಇದನ್ನು ಭರ್ತಿ ಮಾಡುವ ಕುರಿತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ವಿಶ್ವವಿದ್ಯಾಲಯಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ತುಂಬುವುದು ಹಾಗೂ ತಕ್ಷಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಅನುಷ್ಠಾನದ ಕುರಿತು ಚರ್ಚೆ ನಡೆಸಿದರು.
ಉನ್ನತ ಶಿಕ್ಷಣಕ್ಕೆ ಪ್ರಸಕ್ತ ಆಯವ್ಯಯದಲ್ಲಿ 5862 ಕೋಟಿ ರೂ. ಒದಗಿಸಲಾಗಿದ್ದು, ಇದುವರೆಗೆ 3713.73 ಕೋಟಿ ರೂ. ವೆಚ್ಚ ಮಾಡಿ ಶೇ.72.87 ಪ್ರಗತಿ ಸಾಧಿಸಲಾಗಿದೆ. ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಬಜೆಟ್‍ನಲ್ಲಿ 250 ಕೋಟಿ ರೂ. ಒದಗಿಸಲಾಗಿದ್ದು, ಇದನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.
30 ಕೋಟಿ ರೂ. ವೆಚ್ಚದಲ್ಲಿ 21 ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು 9 ಮಹಿಳಾ ಪಾಲಿಟೆಕ್ನಿಕ್‍ಗಳನ್ನು ಉನ್ನತೀಕರಿಸುವ ಕಾರ್ಯ ನಡೆಯುತ್ತಿದೆ. ಮೈಸೂರಿನ ಮಹಾರಾಣಿ ಕಾಲೇಜು ಮತ್ತು ಹಾಸ್ಟೆಲ್‍ನ ನೂತನ ಕಟ್ಟಡ ಕಾಮಗಾರಿಯನ್ನು ಆದಷ್ಟು ಬೇಗನೆ ಆರಂಭಿಸಬೇಕು. ಅನುಮೋದನೆ ನೀಡಲಾಗಿರುವ ಕಾಲೇಜು ಕಟ್ಟಡಗಳ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1842 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಒಂದೇ ದಿನದಲ್ಲಿ 1016 ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿಯೊಂದಿಗೆ ಆದೇಶ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮಾಹಿತಿ ನೀಡಿದರು.
ಅಪ್ರೆಂಟಿಸ್ ಶಿಪ್ ಎಂಬೆಡೆಡ್ ಪದವಿ ಕಾರ್ಯಕ್ರಮದಡಿ ಪ್ರಸಕ್ತ ಸಾಲಿನಲ್ಲಿ 43 ಕಾಲೇಜುಗಳ 1477 ವಿದ್ಯಾರ್ಥಿಗಳಿಗೆ ಸ್ಟೈಪೆಂಡರಿ ಅಪ್ರೆಂಟಿಸ್‍ಶಿಪ್ ನೀಡಲಾಗಿದೆ. ಸೆಂಟರ್ ಫಾರ್ ರೀಸರ್ಚ್ ಇನ್ ಸ್ಕೀಮ್ಸ್ ಅಂಡ್ ಪಾಲಿಸಿಸ್(ಸಿಆರ್ ಐಎಸ್‍ಪಿ) ಮತ್ತು ಸೆಕ್ಟರ್ ಸ್ಕಿಲ್ ಕೌನ್ಸಿಲ್ಸ್ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲಾಗಿದೆ. ಪದವಿ ಜತೆಗೆ ಉದ್ಯೋಗ ಗಿಟ್ಟಿಸಿಕೊಳ್ಳುವ ಅವಕಾಶ ಇದರಿಂದ ಹೆಚ್ಚಿದೆ. ಈ ಯೋಜನೆಯನ್ನು ಇನ್ನಷ್ಟು ಕಾಲೇಜುಗಳಿಗೆ ವಿಸ್ತರಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸುಧಾಕರ್ ಕೋರಿದರು.
ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ ಅಡಿಯಲ್ಲಿ 20 ಕಾರ್ಪೊರೇಟ್ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಉನ್ನತ ಶಿಕ್ಷಣದಲ್ಲಿ ಒಟ್ಟು 24 ಲಕ್ಷ ವಿದ್ಯಾರ್ಥಿಗಳಿದ್ದು, 5 ಲಕ್ಷ ವಿದ್ಯಾರ್ಥಿಗಳು ಸರಕಾರಿ ಕಾಲೇಜುಗಳಲ್ಲಿ ಕಲಿಯುತ್ತಿದ್ದಾರೆ ಎಂದು ಅವರು ತಿಳಿಸಿದರು.
ಉನ್ನತ ಶಿಕ್ಷಣಕ್ಕೆ ಒಟ್ಟಾರೆ ಪ್ರವೇಶಾತಿ ರಾಜ್ಯದಲ್ಲಿ ಶೇ.36 ರಷ್ಟಿದೆ. ದೇಶದ ಶೇಕಡಾವಾರು 27.30 ರಷ್ಟಿದೆ. ಉನ್ನತ ಶಿಕ್ಷಣ ಪ್ರವೇಶಾತಿಯಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ 12ನೇ ಸ್ಥಾನದಲ್ಲಿದ್ದು, ಇನ್ನಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕು. ಕನ್ನಡ ವಿಶ್ವವಿದ್ಯಾಲಯ ಮತ್ತು ಜಾನಪದ ವಿಶ್ವವಿದ್ಯಾಲಯಗಳ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲು ಇಲಾಖಾ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.
ಸಭೆಯಲ್ಲಿ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.