ವಿ.ಪ.ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಅರ್ಜಿ | ವಿಚಾರಣೆ ಎ.15ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

PC : PTI
ಚಿಕ್ಕಮಗಳೂರು : 2021, ಡಿ.10ರಂದು ಸ್ಥಳೀಯ ಸಂಸ್ಥೆ ಪ್ರತಿನಿಧಿಸುವ ವಿಧಾನ ಪರಿಷತ್ ಚುನಾವಣೆ ಸಂಬಂಧ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಎ.15ಕ್ಕೆ ಮುಂದೂಡಿ ನ್ಯಾಯಾಲಯ ಆದೇಶಿಸಿದೆ.
ಮಾ.4ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಮಾ.25ಕ್ಕೆ ವಿಚಾರಣೆ ಮುಂದೂಡಿತ್ತು. ಮಂಗಳವಾರ ನಡೆಯಬೇಕಿದ್ದ ಅರ್ಜಿ ವಿಚಾರಣೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಸ್ಥಳೀಯ ಸಂಸ್ಥೆ ಪ್ರತಿನಿಧಿಸುವ ವಿಧಾನ ಪರಿಷತ್ ಚುನಾವಣೆಯಲ್ಲಿ ಎಂ.ಕೆ.ಪ್ರಾಣೇಶ್ ಪ್ರತಿಸ್ಪರ್ಧಿ ಗಾಯತ್ರಿ ಶಾಂತೇಗೌಡ ಕೇವಲ ಆರು ಮತಗಳ ಅಂತರಿಂದ ಸೋತಿದ್ದರು. ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರ ಮತದಾನ ಹಕ್ಕನ್ನು ಪ್ರಶ್ನಿಸಿ ಗಾಯತ್ರಿ ಶಾಂತೇಗೌಡ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನ ಮಾಡುವ ಹಕ್ಕಿದೆಯೇ ಅಥವಾ ಇಲ್ಲವೇ ಎಂದು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಮಾ.4ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಸಂಬಂಧ ಕೇಂದ್ರ ಸರಕಾರ ಹಾಗೂ ಕೇಂದ್ರ ಚುನಾವಣಾ ಆಯೋಗ ಆಕ್ಷೇಪ ಇದ್ದಲ್ಲಿ ಅರ್ಜಿ ಸಲ್ಲಿಸುವಂತೆ ಆದೇಶಿಸಿ ಪ್ರಕರಣದ ವಿಚಾರಣೆಯನ್ನು ಮಾ.25ಕ್ಕೆ ಮುಂದೂಡಲ್ಪಟ್ಟಿತ್ತು.
ಈ ಪ್ರಕರಣ ಸಂಬಂಧ ನ್ಯಾಯಾಲಯದ ಆದೇಶದಂತೆ ರಾಜ್ಯ ಚುನಾವಣಾ ಆಯೋಗ ಫೆ.28ರಂದು ಮರು ಮತ ಎಣಿಕೆ ನಡೆಸಿ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.