ಹಂಪಿ ಕನ್ನಡ ವಿವಿಗೆ 23 ಕೋಟಿ ರೂ.ಅನುದಾನ ಬಿಡುಗಡೆ ಮಾಡಿ : ಮುಖ್ಯಮಂತ್ರಿ ಚಂದ್ರು ಆಗ್ರಹ
ಬೆಂಗಳೂರು : ಹಂಪಿ ಕನ್ನಡ ವಿವಿಗೆ ಕೂಡಲೇ 23 ಕೋಟಿ ರೂ.ಅನುದಾನ ಬಿಡುಗಡೆ ಮಾಡಬೇಕೆಂದು ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಆಗ್ರಹಿಸಿದ್ದಾರೆ.
ರವಿವಾರ ಈ ಸಂಬಂಧ ಸಿಎಂಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಚಂದ್ರು, ‘ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿ ರಾಜಕೀಯಕ್ಕೆ ಪಾದರ್ಪಣೆ ಮಾಡಿ ಇಂದು ಸಿಎಂ ಆಗಿರುವ ಸಂದರ್ಭದಲ್ಲಿ ಕನ್ನಡದ ಕೈಂಕರ್ಯಕ್ಕಾಗಿಯೇ ಮೀಸಲಿಟ್ಟಿರುವ ಕನ್ನಡ ವಿವಿ ಕುಲಪತಿಗಳು ಪತ್ರ ಬರೆದು ನಂತರ ಸ್ವತಃ ಸಿಎಂ ಅನುದಾನ ಬಿಡುಗಡೆ ಮಾಡಲು ಆದೇಶ ಮಾಡಿದ್ದರೂ ಆರ್ಥಿಕ ಇಲಾಖೆಯಿಂದ 5 ತಿಂಗಳಾದರೂ ಅನುದಾನ ಬಿಡುಗಡೆ ಮಾಡಲು ಮೀನಾಮೇಷ ಎಣಿಸುತ್ತಿರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಹೇಳಿದ್ದಾರೆ.
ಇದರಲ್ಲಿ ಎಸ್ಸಿಎಸ್‍ಪಿ/ಟಿಎಸ್‍ಪಿ ಯೋಜನೆ ಹಾಗೂ ಗಿರಿಜನ ಉಪ ಯೋಜನೆಗೆ ಮೀಸಲಿಟ್ಟಿರುವ ಹಣವೂ ಸೇರಿದೆ. ಕೂಡಲೇ ಅನುದಾನ ಬಿಡುಗಡೆ ಮಾಡದಿದ್ದಲ್ಲಿ ಕನ್ನಡ ಕಟ್ಟಾಳುವಾಗಿ ಹೋರಾಟದ ಹಾದಿಯನ್ನು ಹಿಡಿಯಬೇಕಾಗುತ್ತದೆ ಎಂದು ಚಂದ್ರು, ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.