ಪರಿಷತ್‌ನ 4 ಸ್ಥಾನಗಳಿಗೆ ನಾಮನಿರ್ದೇಶನ; ಸಿಎಂ ಇಂದು ಹೊಸದಿಲ್ಲಿಗೆ

ಬೆಂಗಳೂರು : ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳ ಭರ್ತಿ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಎಐಸಿಸಿ ಮುಖಂಡರೊಂದಿಗೆ ಸಮಾಲೋಚನೆ ನಡೆಸಲು ಇಂದು(ಎ.2ರಂದು) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಮಂಡಿನೋವಿನ ಹಿನ್ನೆಲೆಯಲ್ಲಿ ಎರಡು ತಿಂಗಳಿಂದ ವಿಶ್ರಾಂತಿಗಾಗಿ ಬೆಂಗಳೂರಿನಲ್ಲೇ ಉಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಹುದಿನಗಳ ನಂತರ ಹೊಸದಿಲ್ಲಿಗೆ ತೆರಳುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಮುಖಂಡರನ್ನು ಭೇಟಿ ಮಾಡಲಿದ್ದಾರೆ.
ಈ ವೇಳೆ ಪರಿಷತ್‌ನ 4 ಸ್ಥಾನಗಳಿಗೆ ಯಾರನ್ನು ನಾಮನಿರ್ದೇಶನ ಮಾಡಬೇಕು ಎಂಬುದನ್ನು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ. ದಿಲ್ಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು ದಿಲ್ಲಿಯಲ್ಲಿಯೇ ಎರಡು ದಿನಗಳ ಕಾಲ ವಾಸ್ತವ್ಯ ಹೂಡಿ ಪರಿಷತ್ ನಾಮನಿರ್ದೇಶನ ಸದಸ್ಯರ ಕುರಿತು ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.