18 ಬಿಜೆಪಿ ಶಾಸಕರ ಅಮಾನತು ಆದೇಶ ರದ್ದುಗೊಳಿಸಲು ಸ್ಪೀಕರ್, ಸಿಎಂಗೆ ರಾಜ್ಯಪಾಲರ ಪತ್ರ?
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಬೆಂಗಳೂರು : ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಸ್ಪೀಕರ್ ಪೀಠಕ್ಕೆ ಅಗೌರವಯುತವಾಗಿ ನಡೆದುಕೊಂಡ ಆಪಾದನೆಯ ಹಿನ್ನೆಲೆಯಲ್ಲಿ ಬಿಜೆಪಿಯ 18 ಶಾಸಕರನ್ನು ಸ್ಪೀಕರ್ ಯು.ಟಿ.ಖಾದರ್ ಆರು ತಿಂಗಳ ಅವಧಿಗೆ ಅಮಾನತು ಮಾಡಿ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಸ್ಪೀಕರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಸೋಮವಾರ ರಾಜ್ಯಪಾಲರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗವು, ಶಾಸಕರ ಅಮಾನತು ಆದೇಶವನ್ನು ಹಿಂಪಡೆಯುವ ಸಂಬಂಧ ಮಧ್ಯಪ್ರವೇಶ ಮಾಡುವಂತೆ ಮನವಿ ಸಲ್ಲಿಸಿತು.
ಬಿಜೆಪಿ ನಿಯೋಗದ ಮನವಿಯ ಹಿನ್ನೆಲೆಯಲ್ಲಿ ಸ್ಪೀಕರ್ ಹಾಗೂ ಸಭಾ ನಾಯಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿರುವ ರಾಜ್ಯಪಾಲ, ವಿಧಾನಸಭೆಯ ವಿಪಕ್ಷ ನಾಯಕರು ಹಾಗೂ ಸದಸ್ಯರು ನನ್ನನ್ನು ಭೇಟಿ ಮಾಡಿ, 18 ಸದಸ್ಯರನ್ನು ಅಮಾನತು ಮಾಡಿರುವ ಆದೇಶವನ್ನು ರದ್ದುಗೊಳಿಸುವ ಬಗ್ಗೆ ದೂರು ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಅಲ್ಲದೇ, ಈ ಆದೇಶವನ್ನು ಮರು ಪರಿಶೀಲಿಸುವಂತೆ ಸ್ಪೀಕರ್ ಹಾಗೂ ರಾಜ್ಯ ಸರಕಾರಕ್ಕೆ ಸೂಚನೆ ನೀಡುವಂತೆ ಮನವಿ ಮಾಡಿದ್ದಾರೆ. ಅಮಾನತುಗೊಂಡಿರುವ ಜನಪ್ರತಿನಿಧಿಗಳ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸಬೇಕು. ಅಲ್ಲದೇ, 18 ಸದಸ್ಯರ ಅಮಾನತು ರದ್ದುಗೊಳಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಂಡು ಅವುಗಳ ವಿವರಗಳನ್ನು ನನಗೆ ತಿಳಿಸಬೇಕು ಎಂದು ರಾಜ್ಯಪಾಲ ಪತ್ರದಲ್ಲಿ ಸೂಚಿಸಿದ್ದಾರೆ ಎನ್ನಲಾಗಿದೆ.