ಬಿಬಿಎಂಪಿ ಕಸದ ಲಾರಿ ಹರಿದು ಬಾಲಕ ಮೃತ್ಯು; ಸಿಟ್ಟಿಗೆದ್ದ ಸ್ಥಳೀಯರಿಂದ ಲಾರಿಗೆ ಬೆಂಕಿ

Update: 2025-03-29 19:17 IST
ಬಿಬಿಎಂಪಿ ಕಸದ ಲಾರಿ ಹರಿದು ಬಾಲಕ ಮೃತ್ಯು; ಸಿಟ್ಟಿಗೆದ್ದ ಸ್ಥಳೀಯರಿಂದ ಲಾರಿಗೆ ಬೆಂಕಿ
  • whatsapp icon

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕಸದ ಲಾರಿ ಹರಿದು ಹತ್ತು ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಇಲ್ಲಿನ ಥಣಿಸಂಧ್ರ ರೈಲ್ವೆ ಟ್ರ್ಯಾಕ್ ಸಮೀಪ ವರದಿಯಾಗಿದೆ.

ಐಮಾನ್(10) ಮೃತ ಬಾಲಕ ಎಂದು ಗುರುತಿಸಲಾಗಿದೆ. ಮಾ.29ರ ಶನಿವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ತಂದೆಯೊಂದಿಗೆ ದ್ವಿಚಕ್ರ ವಾಹನದಲ್ಲಿ ಶಾಲೆಗೆ ಹೋಗುತ್ತಿದ್ದ ಬಾಲಕನ ತಲೆ ಮೇಲೆ ಬಿಬಿಎಂಪಿ ಕಸದ ಲಾರಿ ಹರಿದು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ

ಈ ಘಟನೆಯಿಂದ ಸಿಟ್ಟಿಗೆದ್ದ ಸ್ಥಳೀಯರು ಲಾರಿಗೆ ಬೆಂಕಿ ಹಚ್ಚಿ, ಚಾಲಕನನ್ನು ಥಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಹೆಣ್ಣೂರು ಸಂಚಾರ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ, ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ತನ್ನ ಮಗನಿಗೆ ಬೆಂಗಳೂರಿನ ಹೆಗಡೆ ನಗರದಲ್ಲಿರುವ ಮದರಸಾದಲ್ಲಿ ಅಡ್ಮಿಷನ್ ಮಾಡಿಸಲು ಐಮಾನ್‍ನ ತಂದೆ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದರು. ಥಣಿಸಂದ್ರದ ರೈಲ್ವೆ ಟ್ರ್ಯಾಕ್ ಬಳಿ ಬಂದಾಗ ಕಸದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿದೆ.

ಪರಿಣಾಮ ನೆಲಕ್ಕೆ ಬಿದ್ದ ಐಮಾನ್‍ನ ತಲೆ ಮೇಲೆ ಲಾರಿ ಹರಿದಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಾಲಕನ ತಂದೆಗೂ ಗಾಯಗಳಾಗಿದ್ದು, ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ಉತ್ತರ ಸಂಚಾರ ವಿಭಾಗದ ಡಿಸಿಪಿ ಡಿ.ಆರ್.ಸಿರಿಗೌರಿ ತಿಳಿಸಿದ್ದಾರೆ. ಈ ಘಟನೆ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News