ಬೆಂಗಳೂರಿನಿಂದ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಕಿ: ತುರ್ತು ಭೂ ಸ್ಪರ್ಶ
ಬೆಂಗಳೂರು, ಮೇ 19: ಬೆಂಗಳೂರಿನಿಂದ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ಎಂಜಿನ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ತುರ್ತು ಲ್ಯಾಂಡಿಂಗ್ ಮಾಡಿದ ಘಟನೆ ಶನಿವಾರ ರಾತ್ರಿ ನಡೆದಿರುವುದು ವರದಿಯಾಗಿದೆ.
ವಿಮಾನ ತುರ್ತು ಲ್ಯಾಂಡಿಂಗ್ ಮಾಡಿದ ಕೆಲವೇ ನಿಮಿಷಗಳಲ್ಲಿ ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ತಕ್ಷಣ ಇಳಿಸಲಾಗಿದೆ. ಯಾರಿಗೂ ಗಾಯಗಳಾಗಿಲ್ಲ ಎಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ತಿಳಿಸಿದೆ.
ಬೆಂಗಳೂರಿನಿಂದ ಕೊಚ್ಚಿಗೆ ಹೊರಟಿದ್ದ IX 1132 ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ತಕ್ಷಣ ವಿಮಾನದ ಸಿಬ್ಬಂದಿ ಏರ್ ಟ್ರಾಫಿಕ್ ಕಂಟ್ರೋಲರ್ ಗೆ ಮಾಹಿತಿ ನೀಡಿದ್ದು, ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು. ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾತ್ರಿ 11.12ರ ಸುಮಾರಿಗೆ ವಿಮಾನವು ತುರ್ತು ಭೂ ಸ್ಪರ್ಶ ಮಾಡಿತು. ಲ್ಯಾಂಡಿಂಗ್ ಆದ ತಕ್ಷಣ ಬೆಂಕಿಯನ್ನು ನಂದಿಸಲಾಗಿದ್ದು, ಸಂಭಾವ್ಯ ಭಾರೀ ಅಪಾಯ ತಪ್ಪಿದೆ.
ವಿಮಾನದಲ್ಲಿ 179 ಪ್ರಯಾಣಿಕರು ಹಾಗೂ ಆರು ಮಂದಿ ಸಿಬ್ಬಂದಿಯಿದ್ದರು ಎಂದು ತಿಳಿದುಬಂದಿದೆ.