ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಯೋಜನೆಗಳು ಪರಿಣಾಮಕಾರಿಯಾಗಿ ಮುಂದುವರೆಯಬೇಕು : ಅಕ್ರಂ ಪಾಷ

Update: 2025-04-09 00:44 IST
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಯೋಜನೆಗಳು ಪರಿಣಾಮಕಾರಿಯಾಗಿ ಮುಂದುವರೆಯಬೇಕು : ಅಕ್ರಂ ಪಾಷ
  • whatsapp icon

ಬೆಂಗಳೂರು: ಹಿಂದುಳಿದ ವರ್ಗಗಳ ಮಕ್ಕಳಿಗೆ ಉತ್ತಮ ಶಿಕ್ಷಣ ಸೌಲಭ್ಯ ಮತ್ತು ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಇಲಾಖೆಯ ಯೋಜನೆಗಳು ಪರಿಣಾಮಕಾರಿಯಾಗಿ ಮುಂದುವರೆಯಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತ ಅಕ್ರಂ ಪಾಷ ತಿಳಿಸಿದರು.

ಮಂಗಳವಾರ ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕೇಂದ್ರ ಕಚೇರಿಯಲ್ಲಿ ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2024-25ನೇ ಸಾಲಿನ ರಾಜ್ಯವಲಯ ಮತ್ತು ಜಿಲ್ಲಾವಲಯ ಕಾರ್ಯಕ್ರಮಗಳಲ್ಲಿ ಸಾಧಿಸಿರುವ ಪ್ರಗತಿ ಹಾಗೂ ಮುಂದಿನ 2025-26ನೇ ಆರ್ಥಿಕ ವರ್ಷದಲ್ಲಿ ಕೈಗೊಳ್ಳಬೇಕಾದ ಯೋಜನೆಗಳ ಬಗ್ಗೆ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಇಲಾಖೆಯ ಎಲ್ಲಾ ಅಧಿಕಾರಿಗಳು ಒಟ್ಟಾಗಿ ಕಾರ್ಯನಿರ್ವಹಿಸಿದರೆ ಮಾತ್ರ ನಾವು ಹೆಚ್ಚು ಫಲಪ್ರದ ಫಲಿತಾಂಶಗಳನ್ನು ಪಡೆಯಬಹುದು. ಪ್ರಮುಖವಾಗಿ ಗ್ರಾಮೀಣ ಭಾಗದಲ್ಲಿರುವ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಇರುವಂತಹ ಕಾರ್ಯಕ್ರಮಗಳ ಅನುಷ್ಠಾನವನ್ನು ಸಮರ್ಪಕವಾಗಿ ಮಾಡಬೇಕು ಎಂದು ಅವರು ಹೇಳಿದರು.

2025-26ನೇ ಸಾಲಿಗೆ ನೂತನ ಯೋಜನೆಗಳ ರೂಪರೇಷೆಯ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಲಾಭ ಸಿಗುವಂತೆ ಹೊಸ ವಸತಿನಿಲಯ ಯೋಜನೆಗಳು, ಡಿಜಿಟಲ್ ಶಿಕ್ಷಣ ಮತ್ತು ತರಬೇತಿ ಕೇಂದ್ರಗಳ ಸ್ಥಾಪನೆಗೆ ಒತ್ತು ನೀಡಬೇಕು. ಜೊತೆಗೆ, ಕಲ್ಯಾಣ ಯೋಜನೆಗಳಲ್ಲಿ ಫಲಾನುಭವಿಗಳ ಪ್ರಾಮಾಣಿಕ ಪರಿಶೀಲನೆ, ನೇರ ಲಾಭಾಂತರಣ ವ್ಯವಸ್ಥೆ (ಡಿಬಿಟಿ) ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರುವ ಬಗ್ಗೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲಾಖೆಯ ವಿವಿಧ ವಿಭಾಗಗಳ ಹಿರಿಯ ಅಧಿಕಾರಿಗಳು, ಯೋಜನಾ ನಿರ್ವಾಹಕರು, ಮತ್ತು ವಿವಿಧ ಜಿಲ್ಲೆಗಳ ಪ್ರತಿನಿಧಿಗಳು ಪ್ರಸ್ತುತ ಇರುವಂತಹ ಯೋಜನೆಗಳ ಪರಿಣಾಮಕಾರಿತ್ವದ ಬಗ್ಗೆ ಚರ್ಚಿಸಿದರು. 2024-25ನೇ ಸಾಲಿನಲ್ಲಿ ಇಲಾಖೆಯು ವಿವಿಧ ವಿದ್ಯಾರ್ಥಿ ಧನಸಹಾಯ ಯೋಜನೆಗಳು, ವಸತಿನಿಲಯ ನಿರ್ಮಾಣ, ಉದ್ಯೋಗ ತರಬೇತಿ ಕಾರ್ಯಕ್ರಮಗಳು ಹಾಗೂ ಸ್ವಯಂ ಉದ್ಯೋಗ ಪ್ರೋತ್ಸಾಹ ಯೋಜನೆಗಳಲ್ಲಿ ಉತ್ತಮ ಸಾಧನೆ ಗೈದಿರುವ ಬಗ್ಗೆ ಸಭೆಯಲ್ಲಿ ಪ್ರಸ್ತುತಪಡಿಸಲಾಯಿತು ಎಂದು ಅವರು ಹೇಳಿದರು.

ಅಲ್ಲದೇ, ಮುಂದಿನ ಆರ್ಥಿಕ ವರ್ಷದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ತಳಮಟ್ಟದಲ್ಲಿ ಜನ ಸಂಪರ್ಕ ಹೆಚ್ಚಿಸಿ ಯೋಜನೆಗಳ ಕುರಿತು ಜಾಗೃತಿ ಮೂಡಿಸುವ ಜವಾಬ್ದಾರಿಯುಳ್ಳ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಅಕ್ರಂ ಪಾಷ ಸೂಚನೆ ನೀಡಿದರು.


Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News