ಹಿಂದುಳಿದ ವರ್ಗಗಳ ಆಯೋಗದ ವರದಿ ಪ್ರಶ್ನಿಸಿ ಹೈಕೋರ್ಟ್‌ಗೆ ಮತ್ತೊಂದು ಅರ್ಜಿ ಸಲ್ಲಿಕೆ

Update: 2024-03-27 18:13 GMT

ಬೆಂಗಳೂರು : ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ದಪಡಿಸಿರುವ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ(ಜಾತಿ ಗಣತಿ) ವರದಿಯನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಎಲ್ಲಾ ಜಾತಿ ಮತ್ತು ಸಮುದಾಯಗಳ ಸಮಗ್ರ ಮತ್ತು ವೈಜ್ಞಾನಿಕ ಜಾತಿ ಗಣತಿನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನಿಷ್ಪಕ್ಷಪಾತ ಸಮಿತಿ ರಚಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬೆಂಗಳೂರಿನ ನಿವಾಸಿಗಳಾದ ಕೆ.ಸಿ ಶಿವರಾಮ್, ಎಸ್‌ ವಿ ಮುನಿರಾಜು ಹಾಗೂ ಕೆ ಜಿ ಕುಮಾರ್‌ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರದ್ದ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾರ್ಯದರ್ಶಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದೆ‌.

ಅರ್ಜಿದಾರರ ಪರ ವಕೀಲರು, ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ಆಯೋಗಕ್ಕೆ 2014ರ ಜನವರಿ 23ರಂದು ನೀಡಿರುವ ಆದೇಶವನ್ನು ಅಸಾಂವಿಧಾನಿಕ ಹಾಗೂ ಕಾನೂನುಬಾಹಿರ ಎಂದು ಘೋಷಿಸಬೇಕು. ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಜಾತಿ ಗಣತಿ ವರದಿಯನ್ನು ಸಾರ್ವಜನಿಕಗೊಳಿಸಲು ಆದೇಶಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ವಿಚಾರಣೆ ವೇಳೆ, ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಡಿ.ಆರ್ ರವಿಶಂಕರ್ ಅವರು, ಜಾತಿ ಆಧಾರಿತ ಗಣತಿಗೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಆಯೋಗಕ್ಕೆ ಮುಂದಿನ ಎಲ್ಲಾ ಪ್ರಕ್ರಿಯೆಗಳನ್ನೂ ಸ್ಥಗಿತಗೊಳಿಸಲು ನಿರ್ದೇಶಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ನ್ಯಾಯಾಲಯ ಜಾತಿ ಗಣತಿ ಪ್ರಶ್ನಿಸಿರುವ ಸಂಬಂಧ ಈಗಾಗಲೇ ಹಲವು ಅರ್ಜಿ ಸಲ್ಲಿಕೆಯಾಗಿರುವಾಗ ಈ ಅರ್ಜಿಯ ಔಚಿತ್ಯತೆ ಏನು ಎನ್ನುವ ಪ್ರಶ್ನೆಯನ್ನು ಎತ್ತಿತು. ಅಂತಿಮವಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾರ್ಯದರ್ಶಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಜೂನ್ 5ಕ್ಕೆ ಮುಂದೂಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News