ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ 5.16ಕೋಟಿ ರೂ.ವಿದ್ಯಾರ್ಥಿವೇತನ ಪಾವತಿ : ಅಸಗೋಡು ಜಯಸಿಂಹ

ಬೆಂಗಳೂರು : ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ 3,351 ವಿದ್ಯಾರ್ಥಿಗಳಿಗೆ 5.16 ಕೋಟಿ ರೂ.ಗಳ ವೆಚ್ಚದಲ್ಲಿ ವಿದ್ಯಾರ್ಥಿವೇತನ ಬಿಡುಗಡೆಗೊಳಿಸಿ, ಡಿಬಿಟಿ ಮೂಲಕ ಪಾವತಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಸಗೋಡು ಜಯಸಿಂಹ ತಿಳಿಸಿದ್ದರೆ.
ಮಂಗಳವಾರ ಇಲ್ಲಿನ ಕರ್ನಾಟಕ ರಾಜ್ಯ ಬ್ರಾಹ್ಮಣರ ಅಭಿವೃದ್ಧಿ ಮಂಡಳಿಯಲ್ಲಿ ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ 4,123 ವಿದ್ಯಾರ್ಥಿಗಳು ಶಿಷ್ಯ ವೇತನಕ್ಕಾಗಿ ಅರ್ಜಿ ಸಲ್ಲಿಸಲಾಗಿದ್ದು, 3,351 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿಸಲಾಗಿದೆ ಎಂದರು.
ಪದವಿ ಪೂರ್ವ (ಪಿಯು), ಪದವಿ ವ್ಯಾಸಂಗ ಮಾಡುತ್ತಿರುವ 1,511 ವಿದ್ಯಾರ್ಥಿಗಳಿಗೆ 2.26 ಕೋಟಿ ರೂ., ವೃತ್ತಿಪರ ಕೋರ್ಸ್ (ಮೆಡಿಕಲ್, ಇಂಜಿನಿಯರಿಂಗ್) ವ್ಯಾಸಂಗ ಮಾಡುತ್ತಿರುವ 1,840 ವಿದ್ಯಾರ್ಥಿಗಳಿಗೆ 2.90 ಕೋಟಿ ರೂ.ಗಳನ್ನು ನೇರ ನಗದು ವರ್ಗಾವಣೆ ಮೂಲಕ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಆರ್ಥಿಕವಾಗಿ ಹಿಂದುಳಿದಿರುವ ವಿಪ್ರ ಸಮುದಾಯದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಬ್ರಾಹ್ಮಣ ಮಂಡಳಿ ವತಿಯಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವುದರೊಂದಿಗೆ ಸಮಾಜಕ್ಕೆ ಬೆಳಕಾಗಬೇಕು ಎಂದು ಅವರು ಹೇಳಿದರು.
2025-26ನೆ ಸಾಲಿನ ಆಯವ್ಯಯದಲ್ಲಿ ಮುಖ್ಯಮಂತ್ರಿಗಳು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 10 ಕೋಟಿ ರೂ.ಗಳ ಅನುದಾನವನ್ನು ಹಂಚಿಕೆ ಮಾಡಿದ್ದಾರೆ ಎಂದು ಅಸಗೋಡು ಜಯಸಿಂಹ ಹೇಳಿದರು.
ಸ್ವಯಂ ಉದ್ಯೋಗದಡಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಲಾಭದಾಯಕ ಉದ್ಯಮ ಸ್ಥಾಪಿಸಲು ಸಾಲದ ಮೇಲೆ ಶೇ.20 ರಷ್ಟು ಸಹಾಯಧನ ವಿತರಿಸಲಾಗುತ್ತದೆ. ಈ ಯೋಜನೆಗೆ 192 ಫಲಾನುಭವಿಗಳು ಅನುಕೂಲ ಪಡೆದುಕೊಂಡಿದ್ದು, ಯೋಜನೆಯ ಒಟ್ಟು ವೆಚ್ಚ 36,78,671 ರೂ.ಗಳಗಿರುತ್ತದೆ ಎಂದು ಅವರು ತಿಳಿಸಿದರು.
ಸರಕಾರದ ಎಲ್ಲ ನಿಗಮ ಮಂಡಳಿಗಳಲ್ಲಿ ಯಶಸ್ವಿಯಾಗಿ ನಿರ್ವಹಿಸುತ್ತಿರುವ ನೇರ ಸಾಲ ಯೋಜನೆಯನ್ನು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದಲೂ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವ್ಯಾಪಾರಿಗಳಿಗೆ ನೇರ ಸಾಲ ನೀಡುವ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿರುತ್ತದೆ ಎಂದು ಅವರು ತಿಳಿಸಿದರು.
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕಿ ನಿರ್ದೇಶಕಿ ದೀಪಶ್ರೀ ಕೆ. ಮಾತನಾಡಿ, ಮುಂದಿನ ದಿನಗಳಲ್ಲಿ ಮಂಡಳಿಗೆ ಹೆಚ್ಚಿನ ಅನುದಾನವು ದೊರಕಿದ್ದಲ್ಲಿ ಸಮುದಾಯದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಯೋಜನೆಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.