ಬೆಂಗಳೂರು | ಬೈಕ್‍ನಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂ.ನಗದು ವಶ
ಬೆಂಗಳೂರು: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.44 ಕೋಟಿ ರೂ.ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿಯ ಪ್ರಕಟಣೆ ತಿಳಿಸಿದೆ.
ಅಲ್ಲದೆ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕುಣಿಗಲ್ ತಾಲೂಕಿನಲ್ಲಿ ಬೈಕ್‍ನಲ್ಲಿ ಸಾಗಿಸುತ್ತಿದ್ದ 10ಲಕ್ಷ ರೂ.ನಗದನ್ನು ವಶಪಡಿಸಿಕೊಳ್ಳಲಾಗಿದೆ. ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ಲೋಹ ಮತ್ತು ಉಚಿತ ಉಡುಗೊರೆ ವಶಪಡಿಸಿಕೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ 600 ಎಫ್‍ಐಆರ್ ಗಳನ್ನು ದಾಖಲಿಸಿದ್ದಾರೆಂದು ತಿಳಿಸಲಾಗಿದೆ.
79,349 ಶಸ್ತ್ರಾಸ್ತ್ರಗಳನ್ನು ಠೇವಣಿ ಮಾಡಲಾಗಿದೆ. 838 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 8 ಶಸ್ತ್ರಾಸ್ತ್ರಗಳ ಪರವಾನಗಿಯನ್ನು ರದ್ದುಪಡಿಸಲಾಗಿದೆ. ಸಿಆರ್‍ಪಿಸಿಯ ತಡೆಗಟ್ಟುವ ವಿಭಾಗಗಳ ಅಡಿಯಲ್ಲಿ 4,627 ಪ್ರಕರಣಗಳನ್ನು ದಾಖಲಿಸಲಾಗಿದೆ. ಅಬಕಾರಿ ಇಲಾಖೆಯು ಘೋರ ಅಪರಾಧ ಅಡಿಯಲ್ಲಿ 624 ಪ್ರಕರಣಗಳನ್ನು ದಾಖಲಿಸಿದೆ. ಪರವಾನಗಿ ಉಲ್ಲಂಘನೆ ಅಡಿಯಲ್ಲಿ 469 ಪ್ರಕರಣ ದಾಖಲಿಸಿದೆ. ಎನ್‍ಡಿಪಿಎಸ್ ಅಡಿಯಲ್ಲಿ 36 ಪ್ರಕರಣಗಳನ್ನು ಮತ್ತು ಕರ್ನಾಟಕ ಅಬಕಾರಿ ಕಾಯ್ದೆ ಅಡಿ 2,087 ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 376 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.