ಬೆಂಗಳೂರು | ವಿದ್ಯುತ್ ಕಂಬ ಬಿದ್ದು ಮಹಿಳೆಯರಿಬ್ಬರು ಮೃತ್ಯು
Update: 2025-03-18 22:26 IST

ಸಾಂದರ್ಭಿಕ ಚಿತ್ರ
ಬೆಂಗಳೂರು: ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಕಂಬ ಮುರಿದು ಬಿದ್ದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಸಂಬಂಧ ತನಿಖೆ ಚುರುಕುಗೊಳಿಸಲಾಗಿದೆ.
ಸುದ್ದಗುಂಟೆಪಾಳ್ಯ ನಿವಾಸಿಗಳಾದ ಸುಮತಿ (35) ಹಾಗೂ ಸೋನಿ ಕುಮಾರಿ (35) ಮೃತಪಟ್ಟಿದ್ದು, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.
ಸೋಮವಾರ ಸಂಜೆ ಸುದ್ದಗುಂಟೆಪಾಳ್ಯ ಮುಖ್ಯರಸ್ತೆಯ ದುರಸ್ತಿ ಕಾಮಗಾರಿ ನಡೆಯುತ್ತಿದ್ದಾಗ ಜೆಸಿಬಿ ವಾಹನ ಹಿಮ್ಮುಖವಾಗಿ ಚಲಿಸುವಾಗ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಇದರಿಂದ ವಿದ್ಯುತ್ ಕಂಬ ಮುರಿದು ನಡೆದು ಬರುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಬಿದ್ದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಜೆಸಿಬಿ ಯಂತ್ರವನ್ನು ಜಪ್ತಿ ಮಾಡಿದ್ದಾರೆ. ಚಾಲಕನನ್ನು ವಶಕ್ಕೆ ಪಡೆದಿದ್ದು ತನಿಖೆ ಕೈಗೊಂಡಿದ್ದಾರೆ.