ಬೆಂಗಳೂರು | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ : ಸೆಕ್ಯೂರಿಟಿ ಗಾರ್ಡ್ ವಶಕ್ಕೆ
Update: 2024-05-19 13:45 GMT
ಬೆಂಗಳೂರು : ಚಾಕೋಲೆಟ್ ಕೊಡಿಸುವುದಾಗಿ ಆಸೆ ತೋರಿಸಿ ಕರೆದೊಯ್ದು 10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸೆಕ್ಯೂರಿಟಿ ಗಾರ್ಡ್‍ನನ್ನು ಇಲ್ಲಿನ ಹೆಬ್ಬಾಳ ಠಾಣೆಯ ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.
ಬಾಲಕಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಬಿಹಾರಿ ಮೂಲದ ಸೆಕ್ಯೂರಿಟಿ ಗಾರ್ಡ್ ರಾಜೇಶ್(55) ಎಂಬುವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ನಾಗೇನಹಳ್ಳಿಯ ಅಪಾರ್ಟ್‍ಮೆಂಟ್‍ವೊಂದರಲ್ಲಿ ರಾಜೇಶ್ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಮೇ 19ರ ಶನಿವಾರ ಸಂಜೆ ಅಪಾರ್ಟ್‍ಮೆಂಟ್ ಸಮೀಪದ ಮನೆಯ ಬಾಲಕಿಗೆ ಆರೋಪಿ ಚಾಕೋಲೆಟ್ ಕೊಡಿಸುವುದಾಗಿ ಆಸೆ ತೋರಿಸಿ ಶೌಚಾಲಯದ ಬಳಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೋಷಕರು ದೂರು ನೀಡಿದ್ದಾರೆ.
ಈ ಬಗ್ಗೆ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಜರುಗಿಸಿರುವುದಾಗಿ ಪೋಲೀಸರು ತಿಳಿಸಿದ್ದಾರೆ.