ಬೆಂಗಳೂರು | ಫ್ಲೆಕ್ಸ್, ಬ್ಯಾನರ್ ನಿಯಂತ್ರಣಕ್ಕೆ ಅಫ್ಲಿಕೇಷನ್ ಸಿದ್ಧಪಡಿಸಲು ಬಿಬಿಎಂಪಿ ಚಿಂತನೆ

Update: 2024-07-30 14:58 GMT

ಬೆಂಗಳೂರು : ನಗರದಲ್ಲಿ ಅನಧಿಕೃತವಾಗಿ ಅಳವಡಿಸುತ್ತಿರುವ ಫ್ಲೆಕ್ಸ್, ಬ್ಯಾನರ್ ನಿಯಂತ್ರಣಕ್ಕೆ ಸಂಬಂಧಿಸಿ ಬಿಬಿಎಂಪಿ ವತಿಯಿಂದ ಅಫ್ಲಿಕೇಷನ್ ಸಿದ್ಧಪಡಿಸಲು ಚಿಂತನೆ ನಡೆಸಲಾಗಿದೆ ಎಂದು ಬಿಬಿಎಂಪಿಯ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದ್ದಾರೆ.

ಮಂಗಳವಾರ ಇಲ್ಲಿನ ಪೊಲೀಸ್ ಅಧಿಕಾರಿ ಕಛೇರಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸುತ್ತಿರುವ ಫ್ಲೆಕ್ಸ್, ಬ್ಯಾನರ್ ಗಳ ನಿಯಂತ್ರಣಕ್ಕಾಗಿ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಜು.1ರಿಂದ ಅನಧಿಕೃತವಾಗಿ ಅಳವಡಿಸುತ್ತಿರುವ ಫ್ಲೆಕ್ಸ್, ಬ್ಯಾನರ್ ಗಳ ಮೇಲೆ ನಿಗಾವಹಿಸಲಾಗುತ್ತಿದ್ದು, 8500ಕ್ಕೂ ಹೆಚ್ಚು ಫ್ಲೆಕ್ಸ್, ಬ್ಯಾನರ್‌ ಗಳನ್ನು ತೆರವುಗೊಳಿಸಿ 180ಕ್ಕೂ ಹೆಚ್ಚು ಎಫ್‍ಐಆರ್ ದಾಖಲಿಸಲಾಗಿದೆ ಎಂದು ಹೇಳಿದರು.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ನಗರದಲ್ಲಿ ಅನಧಿಕೃವಾಗಿ ಅಳವಡಿಸುವ ಫ್ಲೆಕ್ಸ್, ಬ್ಯಾನರ್ ನಿಯಂತ್ರಣಕ್ಕಾಗಿ ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆಯು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಪ್ರಮಾಣಿತ ಕಾರ್ಯಾಚರಣೆಯ ವಿಧಾನವನ್ನು(ಎಸ್‍ಒಪಿ) ಹೊರಡಿಸಲಾಗುತ್ತದೆ ಎಂದು ತಿಳಿಸಿದರು.

ಫ್ಲೆಕ್ಸ್, ಬ್ಯಾನರ್ ಫ್ರಿಂಟಿಂಗ್ ಯುನಿಟ್ಸ್ ಗಳಿಗೆ ಎಚ್ಚರಿಕೆ: ಪಾಲಿಕೆ ವ್ಯಾಪ್ತಿಯ ಆಯಾ ವಲಯ ವ್ಯಾಪ್ತಿಯಲ್ಲಿ ಬರುವ ಫ್ರಿಂಟಿಂಗ್ ಯುನಿಟ್ಸ್ ಪಟ್ಟಿ ಮಾಡಿಕೊಂಡು ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ಸಹಯೋಗದೊಂದಿಗೆ ಫ್ರಿಂಟಿಂಗ್ ಯುನಿಟ್‍ಗಳಿಗೆ ಭೇಟಿ ನೀಡಿ ಯಾವುದೇ ಕಾರಣಕ್ಕೂ ಅನಧಿಕೃತ ಜಾಹೀರಾತುಗಳನ್ನು ಮುದ್ರಿಸದಂತೆ ಎಚ್ಚರಿಕೆ ನೀಡಬೇಕು. ಪಾಲಿಕೆಯಿಂದ ಅನುಮತಿಯಿಲ್ಲದೆ ಯಾವುದೇ ಅನಧಿಕೃತ ಜಾಹೀರಾತುಗಳನ್ನು ಮುದ್ರಿಸಿದಲ್ಲಿ ಅದನ್ನು ವಶಪಡಿಸಿಕೊಂಡು, ದಂಡ ವಿಧಿಸುವ ಜೊತೆಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಪೊಲೀಸ್ ಠಾಣಾವಾರು ನೋಡಲ್ ಅಧಿಕಾರಿ ನಿಯೋಜನೆ: ಅನಧಿಕೃತ ಫ್ಲೆಕ್ಸ್, ಬ್ಯಾನರ್ ನಿಯಂತ್ರಣಕ್ಕಾಗಿ ಆಯಾ ವಲಯ ವ್ಯಾಪ್ತಿಯಲ್ಲಿ ಬರುವ ಪೊಲೀಸ್ ಠಾಣಾವಾರು ಪಾಲಿಕೆಯಿಂದ ಒಬ್ಬೊಬ್ಬ ನೋಡಲ್ ಅಧಿಕಾರಿಯನ್ನು ನಿಯೋಜಿಸಬೇಕು. ಇದರಿಂದ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಾಧಿಸಲು ಅನುಕೂಲವಾಗಲಿದೆ. ಆದುದರಿಂದ ಕೂಡಲೆ ಪೊಲೀಸ್ ಠಾಣಾವಾರು ಒಬ್ಬ ನೋಡಲ್ ಅಧಿಕಾರಿಯನ್ನು ನಿಯೋಜನೆ ಮಾಡಲು ವಲಯ ಆಯುಕ್ತರಿಗೆ ಸೂಚನೆ ನೀಡಿದರು.

1533ಗೆ ಕರೆ ಮಾಡಿ ಮಾಹಿತಿ ಕೊಡಿ: ನಗರದಲ್ಲಿ ಅನಧಿಕೃತ ಫ್ಲೆಕ್ಸ್/ಬ್ಯಾನರ್ ಗಳನ್ನು ಅಳವಡಿಸುವುದು ಕಂಡುಬಂದರೆ ಪಾಲಿಕೆಯ ಸಹಾಯವಾಣಿ ಸಂಖ್ಯೆಯಾದ 1533ಗೆ ಕರೆ ಮಾಡಿ ಮಾಹಿತಿ ನೀಡಬಹುದೆಂದು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.

ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾತನಾಡಿ, ನಗರದ ಸಾರ್ವಜನಿಕ ಸ್ಥಳ, ಪ್ರಮುಖ ರಸ್ತೆಗಳಲ್ಲಿ ಅನಧಿಕೃತವಾಗಿ ಅಳವಡಿಸುತ್ತಿರುವ ಫ್ಲೆಕ್ಸ್, ಬ್ಯಾನರ್ ಗಳಿಂದ ಸಾಕಷ್ಟು ಸಮಸ್ಯೆಗಳಾಗುತ್ತಿದ್ದು, ಅದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪಾಲಿಕೆಯ ಜೊತೆ ಪೊಲೀಸ್ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಕರ್ನಾಟಕ ತೆರೆದ ಸ್ಥಳಗಳು ಕಾಯಿದೆ(ಕೆಒಪಿಡಿ) ಜೊತೆಗೆ ಇತರೆ ಕಾಯಿದೆ ಅಡಿಯಲ್ಲಿಯೂ ಅನಧಿಕೃತವಾಗಿ ಫ್ಲೆಕ್ಸ್ ಬ್ಯಾನರ್‍ಗಳನ್ನು ಅಳವಡಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಸಕ್ರಿಯವಾಗಿ ಕಾರ್ಯಾಚರಣೆ ನಡೆಸುವ ಮೂಲಕ ಅನಧಿಕೃತ ಜಾಹೀರಾತುಗಳಿಗೆ ಕಡಿವಾಣ ಹಾಕಲು ಪಾಲಿಕೆ ಜೊತೆ ಕೈ ಜೋಡಿಸಬೇಕು ಎಂದು ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ವಲಯ ಆಯುಕ್ತ ಡಾ. ಆರ್.ಎಲ್. ದೀಪಕ್, ರಮೇಶ್, ಶಿವಾನಂದ್ ಕಪಾಶಿ, ರಮ್ಯಾ, ಸ್ನೇಹಲ್, ವಿನೋತ್ ಪ್ರಿಯಾ, ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್, ರಮನ್ ಗುಪ್ತಾ, ಎಸಿಪಿಗಳು, ಡಿಸಿಪಿಗಳು, ಜಾಹೀರಾತು ವಿಭಾಗದ ಉಪ ಆಯುಕ್ತರು, ಸಹಾಯಕ ಆಯುಕ್ತರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News