ಬೆಂಗಳೂರು | ಅನಧಿಕೃತ ಫ್ಲೆಕ್ಸ್, ಬ್ಯಾನರ್ಸ್ ಹಾಕಿದರೆ ಕಾನೂನು ಕ್ರಮ : ಬಿಬಿಎಂಪಿ ಎಚ್ಚರಿಕೆ

Update: 2024-05-28 15:05 GMT

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ಸ್, ಬಂಟಿಂಗ್ಸ್, ಭಿತ್ತಿಪತ್ರಗಳು ಸೇರಿದಂತೆ ಇನ್ನಿತರೆ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಮಾಹಿತಿ ಮತ್ತು ದೂರನ್ನು ಸಲ್ಲಿಸಬಹುದಾಗಿದ್ದು, ತಪ್ಪಿತಸ್ಥರ ವಿರುದ್ಧ ಎಫ್.ಐ.ಆರ್ ದಾಖಲು ಮಾಡಿ, ಕಾನೂನು ರೀತಿಯ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ.

ನಿವಾಸಿಗಳ ಕ್ಷೇಮಾಭಿವೃಧ್ಧಿ ಸಂಘಗಳು, ಸರಕಾರೇತರ ಸಂಸ್ಥೆಗಳು ಹಾಗೂ ನಾಗರಿಕರು ಪಾಲಿಕೆಯ ಜಾಹೀರಾತು ವಿಭಾಗದ ವಾಟ್ಸಪ್ ಸಂಖ್ಯೆ 94806 83939 ಗೆ ಛಾಯಾಚಿತ್ರಗಳು ಕಳುಹಿಸುವ ಅಥವಾ ದಕ್ಷಿಣ ವಲಯ ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ 080-2656 6362 / 2297 5704ಗೆ ಕರೆ ಮಾಡಿ ದೂರು ನೀಡಬಹುದಾಗಿದೆ.

ಪ್ರಸ್ತುತ ಜಾರಿಯಲ್ಲಿರುವ ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪ ವಿಧಿಗಳು-2018’ ರಲ್ಲಿ ಅಂಗಡಿ ಮುಂಗಟ್ಟು ಜಾಹೀರಾತುಗಳು, ವಾಹನ ಸ್ವ-ಜಾಹೀರಾತು ಇನ್ನಿತರೆ ಸಣ್ಣಪುಟ್ಟ ಜಾಹೀರಾತುಗಳನ್ನು ಸೀಮಿತ ಅವಧಿಗೆ ಮತ್ತು ಸೀಮಿತ ಅಳತೆಗೆ(ಪಿಪಿಪಿ ಯೋಜನೆಗಳು ಸೇರಿದಂತೆ) ಅನುಮತಿಸಲು ಮಾತ್ರ ಅವಕಾಶವಿರುತ್ತದೆ.

ಇವುಗಳನ್ನು ಹೊರತುಪಡಿಸಿ ಇತರೆ ಯಾವುದೇ ವಸತಿ ಪ್ರದೇಶಗಳಲ್ಲಿ, ಖಾಸಗಿ ಸ್ವತ್ತುಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಿ ವಾಣಿಜ್ಯ ಜಾಹೀರಾತುಗಳು, ಎಲ್‍ಇಡಿ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಜಾಹೀರಾತುಗಳು, ಶುಭಾಶಯಗಳು, ಸಭೆ ಸಮಾರಂಭಗಳು ಕುರಿತ ಜಾಹೀರಾತು ಪ್ರಕಟಣೆಗಳ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರ, ಬಾವುಟಗಳು ಇತ್ಯಾದಿ ಅಳವಡಿಸುವುದನ್ನು ನಿಷೇಧಿಸಲಾಗಿದ್ದರೂ ಮತ್ತೆ ಮತ್ತೆ ಅಳವಡಿಸಲಾಗುತ್ತಿದೆ. ಹೀಗಾಗಿ ಸಾರ್ವಜನಿಕ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದೆ, ಅಲ್ಲದೆ, ನಗರದ ಸೌಂದರ್ಯ ಹಾಳಾಗುತ್ತಿದೆ ಮತ್ತು ಪರಿಸರಕ್ಕೆ ಮಾರಕ ಎಂದು ವಿವರಿಸಿದೆ.

ಅನಧಿಕೃತ ಜಾಹೀರಾತು ಪ್ರಕಟನೆಯ ಬಗ್ಗೆ ಮಾಹಿತಿ ನೀಡಿದ್ದಲ್ಲಿ, ಸ್ಥಳದಲ್ಲಿ ಯಾವುದೇ ಅನಧಿಕೃತ ಜಾಹೀರಾತು ಪ್ರದರ್ಶನ ಮತ್ತು ಜಾಹೀರಾತು ಫಲಕಗಳನ್ನು ಪಾಲಿಕೆಯು ಸಂಬಂಧಪಟ್ಟವರಿಗೆ ದಂಡ ವಿಧಿಸಿ ತಕ್ಷಣವೇ ತೆರವುಗೊಳಿಸುವುದು. ಅಲ್ಲದೇ ಇದಕ್ಕೆ ಸಂಬಂಧಿಸಿದಂತೆ ಅಪರಾಧ ಎಸಗಿರುವವರಿಗೆ ಕರ್ನಾಟಕ ಮುಕ್ತ ಸ್ಥಳಗಳ(ವಿರೂಪಗೊಳಿಸುವಿಕೆ ತಡೆ) ಕಾಯ್ದೆ 1981ರ ಅಡಿಯಲ್ಲಿ ಎಫ್‍ಐಆರ್ ದಾಖಲು ಮಾಡಿ, ಕಾನೂನು ರೀತಿಯ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News