ಬಾಣಂತಿಯರು-ಶಿಶುಗಳ ಮರಣ: ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ
ಬೆಂಗಳೂರು : ಬಳ್ಳಾರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರು ಹಾಗೂ ಶಿಶುಗಳ ಮರಣ ಪ್ರಕರಣಗಳ ಸಂಬಂಧ ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದೆ.
ಪ್ರಕರಣದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಸಭೆಯಲ್ಲಿ ವಿವರಣೆ ಒದಗಿಸಿದ್ದಾರೆ. ಇಂತಹ ಪ್ರಕರಣಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಕಟ್ಟುನಿಟ್ಟಿನ ತಾಕೀತು ಮಾಡಿದ್ದಾರೆ.
ಸರಕಾರಿ ಆಸ್ಪತ್ರೆಗಳಲ್ಲಿ ಇಂತಹ ಘಟನೆಗಳು ಸಂಭವಿಸಿದರೆ ಒಟ್ಟಾರೆ ವ್ಯವಸ್ಥೆ ಮೇಲೆ ದುಷ್ಪರಿಣಾಮ ಬೀರುತ್ತದೆ. ಜನ ಸಾಮಾನ್ಯರು ಸರಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುವಂತಾಗುತ್ತದೆ. ಸರಕಾರಿ ಆಸ್ಪತ್ರೆಗಳಿಗೆ ಸರಬರಾಜು ಆಗುವಂತಹ ಔಷಧಗಳ ಗುಣಮಟ್ಟದ ಬಗ್ಗೆಯೂ ಕಾಲಕಾಲಕ್ಕೆ ಪರಿಶೀಲನೆ ನಡೆಸಬೇಕು. ಅಗತ್ಯ ಮೂಲಸೌಕರ್ಯ ಹೆಚ್ಚಳಕ್ಕೂ ಆದ್ಯತೆ ನೀಡುವಂತೆ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಅವರಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.