ಸ್ವಚ್ಛತಾ ಪೌರಕಾರ್ಮಿಕರ ಮೇಲೆ ಹಲ್ಲೆ ಶಿಕ್ಷಾರ್ಹ ಅಪರಾಧ : ಬಿಬಿಎಂಪಿ ಆದೇಶ

Update: 2024-09-23 14:46 GMT

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುವ ಪೌರಕಾರ್ಮಿಕರ ಮೇಲೆ ಸ್ಥಳೀಯ ನಿವಾಸಿಗಳು, ಸಾರ್ವಜನಿಕರು ಹಲ್ಲೆ, ಜಾತಿ ನಿಂದನೆ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ಬಿಬಿಎಂಪಿ ಆದೇಶಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುವ ಪೌರಕಾರ್ಮಿಕರ ಮೇಲೆ ಸ್ಥಳೀಯ ನಿವಾಸಿಗಳು, ಸಾರ್ವಜನಿಕರು ಹಲ್ಲೆ, ಜಾತಿ ನಿಂದನೆ ಮಾಡುತ್ತಿರುವುದು ಕಂಡುಬಂದಿದ್ದು, ಜಾತಿಯ ಹೆಸರಿನಲ್ಲಿ ನಿಂದಿಸುವುದು, ಹಲ್ಲೆ ಮಾಡುವುದು ಕಾನೂನು ರೀತ್ಯಾ ಶಿಕ್ಷಾರ್ಹ ಅಪರಾಧವಾಗಿರುತ್ತದೆ.

ಭಾರತದ ಸಂವಿಧಾನದ 17ನೆ ವಿಧಿಯು ‘ಅಸ್ಪೃಶ್ಯತೆ’ಯನ್ನು ನಿಷೇಧಿಸಿದೆ ಮತ್ತು ಯಾವುದೇ ರೂಪದಲ್ಲಿ ಅದರ ಆಚರಣೆಯು ಅಪರಾಧವಾಗಿದೆ. ನೈರ್ಮಲ್ಯ, ಸ್ವಚ್ಛತಾ ಕಾರ್ಮಿಕರನ್ನು ಗೌರವಿಸುವುದು ಕೇವಲ ನೈತಿಕ ಬಾಧ್ಯತೆಯಾಗಿರದೆ ಸಮಾಜದ ಅಗತ್ಯವೂ ಆಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ನಿರ್ವಹಿಸುವ ಉದ್ಯೋಗಕ್ಕಿಂತ ವೈಯಕ್ತಿಕ ಘನತೆ ಮತ್ತು ಗೌರವಕ್ಕೆ ಅರ್ಹರಾಗಿರುತ್ತಾರೆ.

ಯಾವುದೇ ಸ್ಥಳದಲ್ಲಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಸದಸ್ಯರನ್ನು ಜಾತಿ ಹೆಸರಿನಿಂದ ನಿಂದಿಸುವುದು ಮತ್ತು ಉದ್ದೇಶಪೂರ್ವಕವಾಗಿ ಅವಮಾನಿಸುವುದು ಅಥವಾ ಬೆದರಿಕೆ ಹಾಕುವುದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ತಿದ್ದುಪಡಿ ಕಾಯಿದೆ 2015 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ.

ಈ ಹಿನ್ನೆಲೆಯಲ್ಲಿ, ಬಿಬಿಎಂಪಿಯಲ್ಲಿನ ಎಲ್ಲ ನಿವಾಸಿಗಳು ಮತ್ತು ಸಾರ್ವಜನಿಕರು ಪೌರಕಾರ್ಮಿಕರನ್ನು ಗೌರವದಿಂದ ಮತ್ತು ಘನತೆಯಿಂದ ನಡೆಸಿಕೊಳ್ಳಬೇಕು. ಪೌರಕಾರ್ಮಿಕ ವೃತ್ತಿಯನ್ನು ಗೌರವಿಸಿ, ಅವರು ಸಮಾಜದಲ್ಲಿ ಘನತೆಯಿಂದ ಬದುಕಲು ಸಹಕರಿಸಬೇಕು ಎಂದು ಬಿಬಿಎಂಪಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News